ಪೊಲೀಸರ ಕಾನೂನು ವಿರೋಧಿ ಕ್ರಮ ಖಂಡಿಸಿ ಹಿಂಜಾವೇ ಪ್ರತಿಭಟನೆ

ಉಡುಪಿ: ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಮುಖಂಡ ಸುನಿಲ್ ಕೆ.ಆರ್., ಲವ್ ಜಿಹಾದ್, ಗೋಹತ್ಯೆ ನಿಷೇಧ, ಮತಾಂತರ ತಡೆಗಟ್ಟಿದರಷ್ಟೇ ಶಾಂತಿ ನೆಲೆಸಲು ಸಾಧ್ಯವಿದೆ. ಅದನ್ನು ಬಿಟ್ಟು ಧರ್ಮ ರಕ್ಷಣೆಗಾಗಿ ಕೆಲಸ ಮಾಡುವ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ನೈತಿಕತೆ ಕಸಿಯುವ ಕೆಲಸವನ್ನು ರಾಜ್ಯ ಸರಕಾರ ಮಾಡಬಾರದು ಎಂದು ಹೇಳಿದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎ.ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಹಿಂಜಾವೆ ಪ್ರಮುಖರಾದ ಮಹೇಶ್ ಬೈಲೂರು, ವಾಸುದೇವ ಗಂಗೊಳ್ಳಿ, ದಿನೇಶ್ ಮೆಂಡನ್, ಉಮೇಶ್ ನಾಯಕ್ ಸೂಡ, ಉಮೇಶ್ ಶೆಟ್ಟಿ ಪಕ್ಕಾಲು, ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು





