ಉಡುಪಿ: ಗಣರಾಜ್ಯೋತ್ಸವ ಸಿದ್ಧತೆಗೆ ಪೂರ್ವಭಾವಿ ಸಭೆ

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆಗಳನ್ನು ನೀಡಿದ್ದಾರೆ.
ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಜ.26ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8:30ಕ್ಕೆ ಆರಂಭವಾಗಲಿದೆ. 8:30ರಿಂದ 8:50ರವರೆಗೆ ದೇಶ ಭಕ್ತಿಗೀತೆ, ನಂತರ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ.
ಬೆಳಗ್ಗೆ 9:00ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕಾರ ಮಾಡಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಇದಕ್ಕಾಗಿ ಮೂರು ದಿನ ಮುಂಚಿತವಾಗಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ವೇದಿಕೆಯ ಸಿದ್ಧತೆ, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು ಹಾಗೂ ಇತರರು ಆಸೀನರಾಗಲು ಪ್ರತ್ಯೇಕ ಆಸನ ವ್ಯವಸ್ಥೆ, ಧ್ವನಿವರ್ಧಕ, ಕುಡಿಯುವ ನೀರಿನ ವ್ಯವಸ್ಥೆ, ಸಿಹಿತಿಂಡಿ ವಿತರಣೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.
ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ನಿರೂಪಣೆ, ಶಿಷ್ಟಾಚಾರ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಭಾರತದ ಸಂವಿಧಾನ ಆಚರಣೆಯ ಪ್ರತೀಕವಾಗಿರುವ ಭಾರತದ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತ ರಿದ್ದರು.







