ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ : ಆರೋಪಿಗಳಿಗೆ ಪೊಲೀಸ್ ಕಸ್ಟಡಿ ಸಾಧ್ಯತೆ

ರೋಹಿತ್ | ಸಂತ್ರಿ
ಉಡುಪಿ, ನ.22: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನ ಸೇರಿದಂತೆ ವಿದೇಶಗಳಿಗೆ ಸೋರಿಕೆ ಮಾಡಿದ ಪ್ರಕರಣದ ಬಂಧಿತ ಇಬ್ಬರು ಆರೋಪಿಗಳನ್ನು ಎರಡು ದಿನಗಳ ನಂತರ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆಗೆ ಒಳಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ನ ನೌಕರರಾದ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯ ರೋಹಿತ್(29) ಮತ್ತು ಸಂತ್ರಿ(37) ಎಂಬವರನ್ನು ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ. ಆರೋಪಿಗಳು ವಾಟ್ಸ್ಆ್ಯಪ್ ಹಾಗೂ ಫೇಸ್ಬುಕ್ ಮೂಲಕ ನೌಕಾ ಸೇನೆಗೆ ಸಂಬಂಧಿಸಿದ ಮಾಹಿತಿಗಳನ್ನು ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸದ್ಯ ಡಿ.3ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಹೆಚ್ಚಿನ ಮಾಹಿತಿಗಾಗಿ ಎರಡು ದಿನಗಳ ಬಳಿಕ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ತಾಂತ್ರಿಕ ವಿಶ್ಲೇಷಣೆ ವರದಿಗಳು ನಮ್ಮ ಕೈ ಸೇರಬೇಕಾಗಿದೆ. ಅದನ್ನು ಕಾಯಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ತನಿಖೆಗೆ ಶಾಸಕರ ಆಗ್ರಹ :
ನೌಕಾಪಡೆಯ ಹಡಗುಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗೃಹ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ದೇಶದ ಭದ್ರತೆಗೆ ಧಕ್ಕೆ ತರುವ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿಯಾಗಿದೆ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಸಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಅಕ್ರಮ ವಲಸಿಗರು ಹಾಗೂ ಬಂಧಿತ ಆರೋಪಿಗಳ ಜಾಲದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನೂ ನಡೆಸಿ ದೇಶದ ಭದ್ರತೆಗೆ ಸವಾಲಾಗಿರುವ ದೇಶ ವಿರೋಧಿ ಶಕ್ತಿಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಗೃಹ ಸಚಿವಾಲಯ ಉನ್ನತ ಮಟ್ಟದ ತನಿಖೆಯನ್ನೂ ನಡೆಸುವಂತೆ ಅವರು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.







