ಎಸೆಸೆಲ್ಸಿ -ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತಾ ಕಾರ್ಯಾಗಾರ

ಉಡುಪಿ, ಜ.27: ಉಡುಪಿ ಜಿಲ್ಲೆ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ನಿರಂತರವಾಗಿ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಪ್ರಥಮ, ದ್ವಿತೀಯ ಸ್ಥಾನಗಳನ್ನು ಪಡೆದು ಶೈಕ್ಷಣಿಕ ಸಾಧನೆಯ ಮೂಲಕ ಕೀರ್ತಿ ತರುವಲ್ಲಿ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ಕಠಿಣ ಪರಿಶ್ರಮದ ಕೊಡುಗೆ ಅಪಾರ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.
ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಾಲಾಭಿವೃದ್ಧಿ ಸಮಿತಿ ಪ್ರತಿನಿಧಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸುಮಾರು 40 ದಿನಗಳು ಬಾಕಿ ಇದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಬರೆಯುವ ನಿಟ್ಟಿನಲ್ಲಿ ಶಿಕ್ಷಕರು ಪ್ರತಿಯೋರ್ವ ವಿದ್ಯಾರ್ಥಿಗಳ ಬಗ್ಗೆ ವೈಯುಕ್ತಿಕ ಗಮನ ಹರಿಸಿ, ಪೋಷಕರೊಂದಿಗೆ ಸಮಾಲೋಚನೆ ಮಾಡಿ ಮನೆಯಲ್ಲಿಯೂ ವಿದ್ಯಾರ್ಥಿಗೆ ಪೂರಕ ವಾತಾವರಣ ಕಲ್ಪಿಸಲು ವಿಶೇಷ ಮುತುವರ್ಜಿ ವಹಿಸ ಬೇಕು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಯಲ್ಲಮ್ಮ ಹಾಗೂ ಉಮಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಪೂರಕ ಅಗತ್ಯ ಮಾಹಿತಿ, ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಪ್ರಾಂಶುಪಾಲ ಜಗದೀಶ್, ಪ್ರೌಢಶಾಲೆ ವಿಭಾಗದ ಮುಖ್ಯೋಪಾಧ್ಯಾಯನಿ ಇಂದಿರಾ ಹಾಗೂ ವಿವಿಧ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.







