ಬ್ರಹ್ಮಾವರದಲ್ಲಿ ಮೂರು ದಿನಗಳ ʼಉಡುಪಿ ಆಹಾರ-ಉದ್ಯಮ ಮೇಳʼಕ್ಕೆ ಚಾಲನೆ

ಬ್ರಹ್ಮಾವರ, ನ.27: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘದ ದಶಮಾನೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಉಡುಪಿ ಆಹಾರ ಮತ್ತು ಉದ್ಯಮ ಮೇಳ-2026’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮೇಳವನ್ನು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಆಹಾರೋದ್ಯಮ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಉದ್ಘಾಟಿಸಿದರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಗೃಹೋಪಯೋಗಿ ವಸ್ತುಗಳ ಮಳಿಗೆಗಳನ್ನು ಉದ್ಘಾಟಿಸಿ ದರು. ಉದ್ಯಮಿ ಮನೋಹರ ಶೆಟ್ಟಿ ಆಹಾರ ಮೇಳಕ್ಕೆ ಚಾಲನೆ ನೀಡಿದರು.
ಸಂಘದ ದಶಮಾನೋತ್ಸವ ಸಂಭ್ರಮದ ಅಂಗವಾಗಿ ದಶರುಚಿ-2026’ ಸಭಾ ಕಾರ್ಯಕ್ರಮದ ದಶಮಾ ನೋತ್ಸವ ಸಮಿತಿ ಅಧ್ಯಕ್ಷ ಹೆರಾಲ್ಡ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಆಹಾರೋದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೃಷ್ಣ ಪ್ರಸಾದ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಹಾಗೂ ಉಡುಪಿಯ ಆಲ್ವಿನ್ ಬೇಕರಿ ವಾಲ್ಟರ್ ಜೋಸೆಫ್ ಸಲ್ಡಾನ್ಹಾರಿಗೆ ಆಹಾರೋದ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ವಿಶ್ವನಾಥ ಕುಲಾಲ್, ದಶಮಾನೋತ್ಸವ ಸಮಿತಿ ಅಧ್ಯಕ್ಷ ಹೆರಾಲ್ಡ್ ಡಿಸೋಜ, ಕೋಶಾಧಿಕಾರಿ ಶಶಿಕಾಂತ್ ಜಿ.ನಾಯಕ್, ಸಂಘಟನಾ ಕಾರ್ಯದರ್ಶಿ ದಿವಾಕರ ಸನಿಲ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಶ್ರೀಧರ ಪಿ.ಎಸ್. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸತ್ಯಪ್ರಕಾಶ್ ಶೆಣೈ ವಂದಿಸಿದರು. ರಾಜೇಶ್ ಕೆ.ಸಿ. ಮತ್ತು ಸುಮಲತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನಾ ಕುಂಜಾಲು ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ವೈಭವದ ವಾಹನ ಜಾಥಾ ನಡೆಯಿತು. ಮೆರವಣಿಗೆಗೆ ಮಂಗಳೂರು ಯುನೈಟೆಡ್ ಟೋಯೊಟಾದ ಸೋನಿಯಾ ಎಂ. ಚಾಲನೆ ನೀಡಿದರು. ಮೇಳದಲ್ಲಿ ಆಹಾರೋದ್ಯಮಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗೂ ಮಾರಾಟ ಮಳಿಗೆಗಳು, ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ಖಾದ್ಯ-ವೈವಿಧ್ಯತೆ ಆಹಾರ ಮಳಿಗೆಗಳು, ಗೃಹೋಪಯೋಗಿ ಮಳಿಗೆಗಳಿ ದ್ದವು. ಮೇಳವು ನ.29ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ನಡೆಯಲಿದೆ. ಪ್ರತಿದಿನ ವೈವಿಧ್ಯ ಮಯ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನರಂಜನಾ ಆಟಗಳು ನಡೆಯಲಿವೆ.






