ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಗೆ 17,181 ಪರೀಕ್ಷಾರ್ಥಿಗಳು: ಡಿಸಿ ಸ್ವರೂಪಾ ಟಿ.ಕೆ.

ಉಡುಪಿ, ಫೆ.17: ಈ ಬಾರಿಯ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಉಡುಪಿ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಸ್ತುತ ವರ್ಷ ಒಟ್ಟಾರೆಯಾಗಿ 17,181 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್‌ರೆನ್ಸ್ ಸಭಾಂಗಣದಲ್ಲಿ ಇಂದು ನಡೆದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-01ನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿ ಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಈ ಸಲ ಪರೀಕ್ಷೆ ಬರೆಯುವ 17,181 ವಿದ್ಯಾರ್ಥಿಗಳಲ್ಲಿ ಹೊಸದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ 16,657. ಉಳಿದಂತೆ 383 ಖಾಸಗಿ ಅಭ್ಯರ್ಥಿಗಳು, 135 ಪುನರಾವರ್ತಿತ ಅಭ್ಯರ್ಥಿಗಳು, 6 ಮಂದಿ ತಮ್ಮ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿದ್ದು, ಪರೀಕ್ಷೆಯು ಬೆಳಗ್ಗೆ 10 ರಿಂದ ಅಪರಾಹ್ನ 1:00 ಗಂಟೆಯವರೆಗೆ ನಿಗದಿತ ದಿನಾಂಕಗಳಲ್ಲಿ ನಡೆಯಲಿವೆ ಎಂದರು.
ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವ ಜೊತೆಗೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಗೂ ಅವರ ಭವಿಷ್ಯದ ವಿದ್ಯಾಭ್ಯಾಸಕ್ಕೆ ಅತಿ ಮುಖ್ಯ ಹಾಗೂ ಮಹತ್ವದ ಘಟ್ಟವಾಗಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಪರೀಕ್ಷೆಯನ್ನು ವ್ಯವಸ್ಥಿತ ಹಾಗೂ ದೋಷರಹಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಬೇಕು ಎಂದರು.
ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಮೊಬೈಲ್, ಸ್ಮಾರ್ಟ್‌ವಾಚ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಹಿತಿ ಯನ್ನು ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆ ಪತ್ರಿಕೆ ಮೂಲಕ ಆರ್ಥಿಕ ಲಾಭಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ಕೇಂದ್ರ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಅಪರಿಚಿತ ವ್ಯಕ್ತಿಗಳು ಕೇಂದ್ರದ ಸುತ್ತಮುತ್ತ ಓಡಾಡದಂತೆ ಎಚ್ಚರ ವಹಿಸಲಾಗುವುದು ಎಂದರು.
ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ಸಾಗಾಟ ಮಾಡಲು ಮೂರು ಜನ ಸದಸ್ಯರ ಸಮಿತಿಯನ್ನು ನೇಮಿಸ ಲಾಗಿದೆ. ಇವರ ವಾಹನಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಪ್ರಶ್ನೆಪತ್ರಿಕೆ ಸಾಗಾಣಿಕೆ ಮಾಡುವ ವಾಹನಕ್ಕೆ ಜಿಪಿಆರ್‌ಎಸ್ ಅಳವಡಿಸಿ ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. 24*7 ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿಯೇ ಖಜಾನೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಠೇವಣೀಕರಿಸಿರುವ ಮತ್ತು ವಿತರಿಸುವ ಬಗ್ಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರ ಗಳಿಗೆ ಅವಶ್ಯಕತೆಗನುಗುಣವಾಗಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸ್ವರೂಪಾ ಟಿ.ಕೆ. ತಿಳಿಸಿದರು.
ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರ ದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇಲಾಖೆಯಿಂದ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಜಾಗೃತದಳದ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ರಶ್ಮಿ,, ಡಿಡಿಪಿಯು ಮಾರುತಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರುಗಳು, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರುಗಳು ಹಾಗೂ ಇತರರು ಉಪಸ್ಥಿತರಿದ್ದರು.
‘ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಹಾಗೂ ಅಳವಡಿಸಿರುವುದನ್ನು ಅಧಿಕಾರಿಗಳು ಖಚಿತ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ಆಸನ, ಬೆಳಕು, ಫ್ಯಾನ್, ಕುಡಿಯುವ ನೀರು ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಬೇಕು. ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಪರೀಕ್ಷಾ ಕೇಂದ್ರದಲ್ಲಿ ವೈದ್ಯರನ್ನೊಳಗೊಂಡ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ.’
-ಸ್ವರೂಪಾ ಟಿ.ಕೆ., ಜಿಲ್ಲಾಧಿಕಾರಿ.
ಶಿಕ್ಷಣ ಸಚಿವರಿಂದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಸೂಚನೆ
ಸಭೆಗೆ ಮುನ್ನ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಪಿಯುಸಿ ಪರೀಕ್ಷೆ ಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಪ್ರತಿಯೊಬ್ಬ ವಿದ್ಯಾರ್ಥಿ ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಗೊಂದಲ ಹಾಗೂ ಧೈರ್ಯಗೆಡದೆ ನಿರಾತಂಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಗಳನ್ನು ಮಾಡಿಕೊಡ ಬೇಕು. ಪರೀಕ್ಷೆ ಕುರಿತು ಯಾವುದೇ ರೀತಿಯ ವದಂತಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಬರುವ ನಕಲಿ ಸುದ್ದಿಗಳಿಗೆ ಕಿವಿಗೊಡದೆ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗಳನ್ನು ಎದುರಿಸಬೇಕು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ಶಿಕ್ಷಣ ಸಚಿವರು ತಿಳಿಸಿದರು.






