ಉಡುಪಿಯ ಶಿರೂರು ಪರ್ಯಾಯ| ಮೂಲ ಸೌಕರ್ಯ ಕಲ್ಪಿಸಲು 6 ಕೋಟಿ ರೂ.: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಜ.6: ಇದೇ ತಿಂಗಳ 18ರಂದು ನಡೆಯಲಿರುವ ಉಡುಪಿಯ ಶಿರೂರು ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡ ಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಹಾಗೂ ವಿವಿಧಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.





