ಉಡುಪಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಪ್ರತಿಕೃತಿ ದಹಿಸಿ ಆಕ್ರೋಶ

ಉಡುಪಿ, ಸೆ.28: ಅನೇಕ ರಾಜ್ಯಗಳಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದಂತೆ ತೀವ್ರ ವಿವಾದಕ್ಕೆ ಕಾರಣರಾದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪ್ರತಿಭಟನಕಾರರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಮುಂದಾದರು. ಈ ವೇಳೆ ಪೊಲೀಸರು ಗೇಟ್ ಹಾಕಿ ತಡೆದರು. ಕೆಲವರು ಗೇಟ್ ಹತ್ತಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಗೇಟ್ ಎದುರೇ ಧರಣಿ ನಡೆಸಿದ ಪ್ರತಿಭಟನಕಾರರು ಚುನಾವಣಾ ಆಯುಕ್ತರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದಕ್ಕೂ ಮುನ್ನ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, ಸಂವಿಧಾನದ ಪರಿವೇ ಇಲ್ಲದೆ ಬಿಜೆಪಿ ಸಂಸದರು ಮಾತನಾಡುತಿದ್ದಾರೆ. ಬಿಜೆಪಿ ಕೇಂದ್ರ ಸರಕಾರ ಚುನಾವಣಾ ಆಯೋಗದ ಮೂಲಕ ನೀಚ ಕೆಲಸವನ್ನು ಮಾಡುತ್ತಿದೆ. ಅಲ್ಲದೆ ಅಚ್ಚೇ ದಿನ್ ಹೇಳಿ ಜನ ವಿರೋಧಿಯಾಗಿ ವರ್ತಿಸುತ್ತಿದೆ. ರಾಮ ಮಂದಿರದ ಹುಂಡಿ ಕಳ್ಳತನ ಮಾಡಿ ದೇಶದ ಜನರ ಭಾವನೆ ಮೇಲೆ ಆಟ ಆಡುತ್ತಿದೆ. ಈ ಬಗ್ಗೆ ಸುಧಾರಿಸಿಕೊಳ್ಳದಿದ್ದರೆ ಮುಂದೆ ಜನ ಬಿಜೆಪಿಯವರ ಮನೆಮನೆಗೆ ನುಗ್ಗಿ ಹೊಡೆಯಲಿದ್ದಾರೆ ಎಂದು ಎಚ್ಚರಿಸಿದರು.
ಈ ಹೋರಾಟವನ್ನು ಮುಂದೆ ತಾಲೂಕು ಹಾಗೂ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಲಾಗುವುದು. ಆದುದರಿಂದ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಸಂವಿಧಾನವನ್ನು ನಾಶ ಮಾಡುವ ರೀತಿಯಲ್ಲಿ ಚುನಾವಣಾ ಆಯೋಗ ವರ್ತಿಸುತ್ತಿದೆ. ಈ ಮೂಲಕ ಲಕ್ಷಾಂತರ ಜನರನ್ನು ಮತದಾನ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗಿದೆ. ಬಡವರು, ಕಾರ್ಮಿಕರು, ಆದಿವಾಸಿಗಳು, ಅಲೆಮಾರಿಗಳು, ದಲಿತರು, ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅಕ್ರಮವಾಗಿ ಚುನಾವಣಾ ಗೆಲ್ಲಲು ಓಟು ಚೋರಿ ಮಾಡುವುದು ಇವರ ಹುನ್ನಾರವಾಗಿದೆ ಎಂದು ಆರೋಪಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕೆಪಿಸಿಸಿ ವಕ್ತಾರೆ ವರೋನಿಕಾ ಕರ್ನೆಲಿಯೋ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಕುಮಾರ್ ಕೊಡವೂರು, ಪ್ರಶಾಂತ್ ಜತ್ತನ್ನ, ಪ್ರಖ್ಯಾತ್ ಶೆಟ್ಟಿ, ಹರಿಪ್ರಸಾದ್ ರೈ, ಜ್ಯೋತಿ ಹೆಬ್ಬಾರ್, ಹಬೀಬ್ ಅಲಿ, ಶಬ್ಬೀರ್ ಉಡುಪಿ, ಶೇಕ್ ವಾಹೀದ್, ಇಸ್ಮಾಯಿಲ್ ಆತ್ರಾಡಿ, ಎಂ.ಪಿ.ಮೊದಿನಬ್ಬ, ಅಬ್ದುಲ್ ಅಝೀಜ್ ಹೆಜಮಾಡಿ, ಹರೀಶ್ ಕಿಣಿ, ಗಣೇಶ್ ನೆರ್ಗಿ, ರಿಯಾಝ್ ಕೋಡಿ, ರಾಜು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.






