Udupi | ಶಾಸಕರು ಎಂಸ್ಯಾಂಡ್ ಲಾಬಿಯ ಫಲಾನುಭವಿಗಳು : ಕಲ್ಲಾಗರ್
ವಿವಿಧ ಬೇಡಿಕೆ ಈಡೇರಿಕೆಗಾಗಿ ಕಟ್ಟಡ ನಿರ್ಮಾಣ ಕಾರ್ಮಿಕರ ಧರಣಿ

ಉಡುಪಿ : ಜಿಲ್ಲೆಯ ಪ್ರಭಾವಿ ರಾಜಕೀಯ ವ್ಯಕ್ತಿಗಳು ಎಂ-ಸ್ಯಾಂಡ್ ವ್ಯವಹಾರದಲ್ಲಿ ತೊಡಗಿಸಿಕೊಂಡು, ಜನರಿಗೆ ಕಡಿಮೆ ದರದಲ್ಲಿ ಮರಳು ದೊರೆಯದಂತೆ ಮಾಡಲಾಗುತ್ತಿದೆ. ಜಿಲ್ಲೆಯ ಶಾಸಕರೂ ಮರಳು ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಆಸಕ್ತಿ ತೋರಿಸುತ್ತಿಲ್ಲ. ಇವರೆಲ್ಲ ಎಂ ಸ್ಯಾಂಡ್ ಲಾಬಿಗಳ ಫಲಾನುಭವಿಗಳಿದ್ದಾರೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದ್ದಾರೆ.
ನಾಲ್ಕು ಕಾರ್ಮಿಕ ಸಂಹಿತೆಗಳನ್ನು(ಲೇಬರ್ ಕೋರ್ಡ್) ರದ್ದುಗೊಳಿಸ ಬೇಕು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್ ಖರೀದಿ ಹಾಗೂ ಉಚಿತ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ತಕ್ಷಣ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಮ್ಮಿಕೊಳ್ಳಲಾದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಿಸಲು ಜಿಲ್ಲಾಡಳಿತ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದರಿಂದ ಸಾವಿರಾರು ಕಟ್ಟಡ ಕಾರ್ಮಿಕ ಕುಟುಂಬಗಳು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಮರಳುಗಾರಿಕೆ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಮರಳುಗಾರಿಕೆ ಆರಂಭವಾಗದೆ ನಿರ್ಮಾಣ ವಲಯದ ಕಾರ್ಮಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಅವರು ದೂರಿದರು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಪರವಾಗಿ ಕೆಲಸಗಳು ನಡೆಯುತ್ತಿಲ್ಲ. ನೈಜ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲಾಗುತ್ತಿದೆ. ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಘಟನೆಯ ವತಿಯಿಂದ ಹಲವು ಬಾರಿ ದೂರು ಹಾಗೂ ಮನವಿ ಸಲ್ಲಿಸಿದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಜಿಲ್ಲೆಯ ಕಟ್ಟಡ ಕಾರ್ಮಿಕರ ಉದ್ಯೋಗಕ್ಕೆ ತೀವ್ರ ತೊಂದರೆಯಾಗಿರುವ 9/11 ಸಮಸ್ಯೆಯೂ ಇನ್ನೂ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ., ಮುಖಂಡರಾದ ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ, ರಾಜೀವ ಪಡುಕೋಣೆ, ದಯಾನಂದ ಕೋಟ್ಯಾನ್, ಉಮೇಶ್ ಕುಂದರ್, ರಾಮ ಕಾರ್ಕಡ, ನಾಗರತ್ನ ಪಡುವರಿ, ಗೋಪಾಲಕೃಷ್ಣ, ಶ್ರೀಧರ ಉಪ್ಪುಂದ, ಸಯ್ಯದ್ ಮೊದಲಾದವರು ಉಪಸ್ಥಿತರಿದ್ದರು. ಗಣೇಶ್ ತೊಂಡೆ ಮಕ್ಕಿ ಸ್ವಾಗತಿಸಿ ವಂದಿಸಿದರು. ಇದಕ್ಕೂ ಮುನ್ನ ಕಟ್ಟಡ ಕಾರ್ಮಿಕರು ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.
‘ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್ ಖರೀದಿ ಮತ್ತು ಆರೋಗ್ಯ ತಪಾಸಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳಿವೆ. ಆದರೂ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಮಂಡಳಿಯು ಕಿಟ್ ಖರೀದಿಗೆ ಆದ್ಯತೆ ನೀಡುತ್ತಿದೆ. ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ಕುಟುಂಬದ ಆಪ್ ಆಧಾರದಲ್ಲಿ ತಿರಸ್ಕರಿಸಲಾಗುತ್ತಿದೆ. ಇದು ಮಂಡಳಿಯ ನಿಯಮಗಳಿಗೆ ವಿರುದ್ಧವಾಗಿದೆ. ಈ ಅನ್ಯಾಯದ ವಿರುದ್ಧ ಸಂಘಟಿತ ಕಾನೂನು ಹೋರಾಟ ಮಾಡಬೇಕು’
-ಸುರೇಶ್ ಕಲ್ಲಾಗರ್, ರಾಜ್ಯ ಕಾರ್ಯದರ್ಶಿ, ಸಿಐಟಿಯು
ನ.25ರಂದು ಡಿಸಿ ಕಚೇರಿಯಲ್ಲಿ ಜಂಟಿಸಭೆ
ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ್, ಮುಂದೆ ಕಾರ್ಮಿಕರು ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಿಸದಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಗೆ ಪರಿಹಾರ ದೊರೆಯುವವರೆಗೆ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಲೇಬೇಕು ಎಂದು ಕಾರ್ಮಿಕರು ಪಟ್ಟು ಹಿಡಿದರು. ನಂತರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಅಪರ ಜಿಲ್ಲಾಧಿಕಾರಿ, ನ.25ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಜಂಟಿ ಸಭೆ ನಡೆಸಿ ಮರಳುಗಾರಿಕೆ ಸೇರಿದಂತೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಭರವಸೆಯ ಹಿನ್ನೆಲೆಯಲ್ಲಿ ಧರಣಿ ಅಂತ್ಯಗೊಳಿಸಲಾಯಿತು. ನ.25ರಂದು ಜಂಟಿ ಸಭೆ ನಡೆಸಿ ಅಂದೇ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕು. ಇಲ್ಲವಾದಲ್ಲಿ ನ.26ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಬಗ್ಗೆ ಕಟ್ಟಡ ಕಾರ್ಮಿಕರು ಈ ಸಂದರ್ಭದಲ್ಲಿ ನಿರ್ಧರಿಸಿದರು.






