ಉಡುಪಿ| 6 ಕೇಂದ್ರಗಳಲ್ಲಿ ನೀಟ್ ಮರು ಪರೀಕ್ಷೆ; 2970 ವಿದ್ಯಾರ್ಥಿಗಳು ನೋಂದಣಿ: ಡಿಸಿ ಸ್ವರೂಪ ಟಿ.ಕೆ

ಉಡುಪಿ, ಜೂ.18: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಜೂನ್ 21ರಂದು ದೇಶಾದ್ಯಂತ ನಡೆಯುವ ನೀಟ್ (ಯುಜಿ) ಮರು ಪರೀಕ್ಷೆ ಉಡುಪಿ ಜಿಲ್ಲೆಯ ಆರು ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟಾರೆಯಾಗಿ 2970 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಹೆಸರು ನೋಂದಾವಣೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ನೀಟ್ ಮರು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜೂನ್ 21ರ ರವಿವಾರ ನಡೆಯುವ ನೀಟ್ ಮರುಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳುಂಟಾಗದಂತೆ ಹಾಗೂ ಪರೀಕ್ಷೆ ಪಾರದರ್ಶಕವಾಗಿ ನಡೆಯಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಸ್ವರೂಪ ಟಿ.ಕೆ. ಅವರು ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ- ಎನ್‌ಟಿಎ) ವತಿಯಿಂದ ನಡೆಯುವ ನೀಟ್ ಮರು ಪರೀಕ್ಷೆ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ 938 ಬಾಲಕರು, 2032 ಬಾಲಕಿಯರು, 7 ಪಿಡಬ್ಲ್ಯೂ ಬಿ.ಡಿ ಅಭ್ಯರ್ಥಿಗಳು ಹಾಗೂ 1 ಸ್ಕ್ರೈಬ್ ಸೌಲಭ್ಯ ಪಡೆದಿರುವ ಅಭ್ಯರ್ಥಿಗಳು ಸೇರಿದಂತೆ ಒಟ್ಟು 2970 ವೈದ್ಯಕೀಯ ಪದವಿ (ಎಂಬಿಬಿಎಸ್) ಕಲಿಯುವ ಆಸಕ್ತ ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅವರು ವಿವರಿಸಿದರು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಪರೀಕ್ಷಾ ಕಾರ್ಯ ನಡೆಸಬೇಕು. ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯಲು ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು ಎಂದು ಅವರು ಸೂಚನೆ ನೀಡಿದರು.
ನೀಟ್ ಮರು ಪರೀಕ್ಷೆ ಜೂನ್ 21ರಂದು ಅಪರಾಹ್ನ 2ರಿಂದ ಸಂಜೆ 5:15ರವರೆಗೆ ನಡೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ಇರಲಿದೆ ಎಂದು ಅವರು ವಿವರಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ವಿದ್ಯಾರ್ಥಿಗಳ ಪರಿಶೋಧನೆ ಕಾರ್ಯ ವನ್ನು ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕು. ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಗಳು, ಕ್ಯಾಲ್ಕುಲೇಟರ್, ಬ್ಲ್ಯೂಟೂತ್ ಡಿವೈಸ್, ಇಯರ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ಗಳು ಮತ್ತು ವಾಲೆಟ್ಸ್, ಹ್ಯಾಂಡ್‌ಬ್ಯಾಗ್ ತರುವುದನ್ನು ನಿಷೇಧಿಸಲಾಗಿದೆ ಎಂದ ಅವರು, ಪರೀಕ್ಷೆಗಳು ಆರಂಭವಾ ಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿಯೇ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು ಎಂದರು.
ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಮೂಲ (ಒರಿಜಿನಲ್) ಗುರುತಿನ ಚೀಟಿಯೊಂದಿಗೆ (ಕಾಲೇಜಿನ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ದಾಖಲೆಗಳ ಮೂಲಪ್ರತಿ) ಸೂಚನೆಯಲ್ಲಿ ತಿಳಿಸಿರುವಂತೆ 2 ಭಾವಚಿತ್ರಗಳೊಂದಿಗೆ ಪರೀಕ್ಷೆಗೆ ಹಾಜರಾಗಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಭ್ಯರ್ಥಿ ಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಶ್ನೆಪತ್ರಿಕೆ ತರಿಸಿಕೊಳ್ಳಲು, ಉತ್ತರ ಪತ್ರಿಕೆ ರವಾನೆಗೆ ಅನುಕೂಲ ವಾಗುವಂತೆ ವಾಹನವನ್ನು ಸಿದ್ಧವಾಗಿಟ್ಟು ಕೊಳ್ಳಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುರ್ತು ಸಂದರ್ಭಗಳನ್ನು ಎದುರಿಸಲು ಅನುಕೂಲವಾಗುವಂತೆ ಅಗ್ನಿ ಶಾಮಕ ವಾಹನಗಳೂ ಸನ್ನದ್ಧವಾಗಿರಬೇಕು. ಮುಂಜಾಗ್ರತೆಯಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ನೀಟ್ ಮರುಪರೀಕ್ಷೆ ಸಂಬಂಧ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವುದೇ ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ಅಧಿಕಾರಿಗಳು ಮಾರ್ಗಸೂಚಿಯಂತೆ ಜಾಗರೂಕರಾಗಿ, ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ನೀಟ್ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಯಾದ ಉಡುಪಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಎನ್. ಕರೀಂ ಖಾನ್ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ವತಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುವುದು. ಬಾಲಕ ಹಾಗೂ ಬಾಲಕಿಯರಿಗೆಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು. ಬಯೋಮೆಟ್ರಿಕ್ ದೃಢೀಕರಣದ ನಂತರವೇ ಎಲ್ಲಾ ಪರೀಕ್ಷಾರ್ಥಿಗಳಿಗೂ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಪರೀಕ್ಷೆ ಮುಗಿದ ನಂತರ ಓ.ಎಂ.ಆರ್ ಶೀಟ್‌ಗಳನ್ನು ವ್ಯವಸ್ಥಿತವಾಗಿ ಮಾರ್ಗಸೂಚಿಯಂತೆ ಜೋಡಿಸಲು ಕ್ರಮಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನೀಟ್ ಪರೀಕ್ಷೆಯ ಡೆಪ್ಯೂಟಿ ಸಿಟಿ ಕೋ- ಆರ್ಡಿನೇಟರ್ ಆದ ಕೇಂದ್ರೀಯ ವಿದ್ಯಾಲಯದ ಶಿಕ್ಷಕ ವಸಂತ ಪದ್ಮಶಾಲಿ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ನೀಟ್ ಮರುಪರೀಕ್ಷಾ ಕೇಂದ್ರಗಳು
ನೀಟ್ ಮರು ಪರೀಕ್ಷೆಯು ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಾದ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿಯ ಎಂ.ಜಿ.ಎಂ. ಪದವಿಪೂರ್ವ ಕಾಲೇಜು, ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಶಾಲೆ), ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು,ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ನೀಟ್ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಯಾದ ಉಡುಪಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಎನ್.ಕರೀಂಖಾನ್ ತಿಳಿಸಿದರು.






