ಉಡುಪಿ | ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರಕಾರಕ್ಕೆ ಪ್ರಸ್ತಾವನೆ : ಡಿಸಿ ಸ್ವರೂಪ ಟಿ.ಕೆ.

ಉಡುಪಿ, ನ.18: ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದರೂ, ಇವರೆಗೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ಸರಕಾರಕ್ಕೆ ಮತ್ತೊಮ್ಮೆ ಪತ್ರ ಬರೆಯಬೇಕು. ಜಿಲ್ಲೆಯಲ್ಲಿ ಮಕ್ಕಳನ್ನು ಹೊತ್ತು ಭಿಕ್ಷಾಟನೆ ಮಾಡುತ್ತಿರುವುದು ಕಂಡುಬಂದಲ್ಲಿ ಅವರನ್ನು ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳು ಇತರ ಇಲಾಖೆಗಳ ಅಧಿಕಾರಿಗಳ ಸಮನ್ವಯದೊಂದಿಗೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಆದಾಗಿಯೂ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕಾನೂನು ರೀತಿಯ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು. ಬಾಲ್ಯವಿವಾಹ ನಿಷೇಧ ಹಾಗೂ ಪೊಕ್ಸೋ ಕಾಯ್ದೆಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಅಲ್ಲಲ್ಲಿ ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಇಂಥ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದರು.
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಅವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮ ಹಾಗೂ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳು ನಿಯಮಿತವಾಗಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. ಆದರೆ 2025ರ ಎಪ್ರಿಲ್ನಿಂದ ಜೂನ್ ತಿಂಗಳವರೆಗೆ 146 ಸಭೆಗಳು ನಡೆದಿದ್ದು, ಜುಲೈನಿಂದ ಈವರೆಗೆ 116 ಸಭೆಗಳು ಮಾತ್ರ ನಡೆದಿವೆ. ರಕ್ಷಣಾ ಸಮಿತಿಗಳು ಕಾಲಕಾಲಕ್ಕೆ ಸಭೆ ನಡೆಸಿ, ಮಕ್ಕಳ ರಕ್ಷಣಾ ಕ್ರಮಗಳ ಜಾರಿಗೆ ಮುಂದಾಗಬೇಕು ಎಂದರು.
ಶಾಲೆಯ ರಜಾ ದಿನಗಳಲ್ಲಿ, ಹಬ್ಬದ ಸಂದರ್ಭದಲ್ಲಿ ಮಕ್ಕಳು ಹೆಚ್ಚಾಗಿ ಭಿಕ್ಷಾಟನೆಯಲ್ಲಿ ತೊಡಗುವ ಕುರಿತು ನಗರದ ಆದಿ ಉಡುಪಿ ಹಾಗೂ ಹನುಮಂತನಗರ ವ್ಯಾಪ್ತಿಯಲ್ಲಿ ದೂರುಗಳು ಬರುತ್ತಿವೆ. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ ನಿಗಾ ವಹಿಸಬೇಕು. ಶಾಲೆಗೆ ಹೆಚ್ಚು ಗೈರುಹಾಜರಾಗುವ ಮಕ್ಕಳ ಮೇಲೆ ಶಿಕ್ಷಕರು ಹೆಚ್ಚಿನ ನಿಗಾ ಇಡಬೇಕು ಎಂದು ಅವರು ಹೇಳಿದರು.
ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣದ ಮೂಲಕ ಜ್ಞಾನ ಸಂಪಾದಿಸಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಎಂದರು.
ಪ್ರಾಯೋಜಕತ್ವ ಯೋಜನೆಯಡಿ 2025ರ ಎಪ್ರಿಲ್ನಿಂದ ಜುಲೈವರೆಗೆ 392 ಫಲಾನುಭವಿಗಳಿಗೆ ಸಹಾಯಧನ ವಿತರಿಸಲಾಗಿದೆ. ಹೊಸದಾಗಿ 141 ಅರ್ಜಿಗಳು ಬಂದಿದ್ದು, ಅರ್ಹರಿಗೆ ಈ ಯೋಜನೆಯ ಲಾಭ ದೊರಯುವಂತಾಬೇಕು ಎಂದು ಸ್ವರೂಪ ಟಿ.ಕೆ. ತಿಳಿಸಿದರು.
ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆಯ ಕುರಿತು ಭಿತ್ತಿಪತ್ರ ಹಾಗೂ ಮಕ್ಕಳ ಸಹಾಯವಾಣಿ- 1098 ಸಂಖ್ಯೆಯ ಸ್ಟಿಕ್ಕರ್ ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







