ಉಡುಪಿ | ಡಿ.13ರಂದು ವಿಶ್ವ ಶಾಂತಿ ಸಮಾವೇಶ

ಉಡುಪಿ, ಡಿ.5: ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವಗೀತಾ ಪರ್ಯಾಯ ಮಹೋತ್ಸವದ ಪ್ರಯುಕ್ತ ವಿಶ್ವಶಾಂತಿ ಸಮಾವೇಶವನ್ನು ಡಿ.13ರಂದು ಬೆಳಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಮಠದ ಗೀತಾ ಮಂದಿರದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಅಮೇರಿಕಾದ ವರ್ಲ್ಡ್ ರಿಲೀಜಿಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್.ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀಮಧುಸೂದನ ಸಾಯಿ, ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿರುವರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರನ್ನು ಸನ್ಮಾನಿಸಲಾಗುವುದೆಂದು ಅವರು ಮಾಹಿತಿ ನೀಡಿದರು.
ಕೋಟಿ ಗೀತಾ ಲೇಖನ ಯಜ್ಞಕ್ಕೆ ಸಂಬಂಧಿಸಿ ಭಕ್ತಾಧಿಗಳಿಂದ ಸಾಕಷ್ಟು ಬೇಡಿಕೆಗಳಿದ್ದು, ಈ ಯೋಜನೆ ಮುಂದಿನ ಎರಡು ವರ್ಷ ಕಾಲ ಮುಂದುವರಿಯಲಿದೆ. ಆನ್ಲೈನ್ ಗೀತಾ ರಸಪ್ರಶ್ನೆ ನಡೆಯುತ್ತಿದ್ದು, 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.







