ಮುರಿನಕಟ್ಟೆ ಧ್ವಂಸ ಪ್ರಕರಣ: ಪ್ರಮುಖ ಆರೋಪಿಗಳ ಬಂಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ

ಭಟ್ಕಳ: ತಟ್ಟಿಹಕ್ಕಲು ದುರಂತ ನಡೆದ ದಿನವೇ ಸಂಭವಿಸಿದ ಮುರಿನಕಟ್ಟೆ ಧ್ವಂಸ ಪ್ರಕರಣದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಬಂಧಿಸಿ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಂಡಲ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರಂದು ತಟ್ಟಿಹಕ್ಕಲಿನಲ್ಲಿ ಸಂಭವಿಸಿದ ದುರಂತದಲ್ಲಿ ಶಿರಾಲಿಯ 11 ಮಂದಿ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದರು. ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಸೂಚಿಸಿರುವುದಾಗಿ ಹೇಳಿದರು.
ದುರಂತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ವರದಿ ನೀಡಬೇಕು. ಘಟನೆಯ ಬಗ್ಗೆ ಅಧಿಕೃತ ಸ್ಪಷ್ಟನೆ ಅಗತ್ಯವಿದೆ ಎಂದು ಹೇಳಿದರು. ಅದೇ ದಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಮುರಿನಕಟ್ಟೆ ಬಳಿ ಹಿಂದೂ ಭಕ್ತರು ನಿರ್ಮಿಸಿದ್ದ ಕಟ್ಟೆಯನ್ನು ಧ್ವಂಸಗೊಳಿಸಿರುವುದು ಹಿಂದೂ ಸಮಾಜದ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.
“ಕಟ್ಟೆ ಧ್ವಂಸ ಪ್ರಕರಣದಲ್ಲಿ ಕೆಲವರನ್ನು ಬಂಧಿಸಲಾಗಿದೆಯಾದರೂ, ಘಟನೆಯ ಹಿಂದೆ ಇರುವ ಎಲ್ಲ ಆರೋಪಿ ಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಡಿದವರ ವಿರುದ್ಧವೂ ತನಿಖೆ ನಡೆಯಬೇಕು” ಎಂದು ಒತ್ತಾಯಿಸಿದರು.
ಈ ವಿಚಾರವಾಗಿ ನ್ಯಾಯ ಕೇಳಲು ಹೋದ ಬಿಜೆಪಿ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿದ ಅವರು, ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮುರಿನಕಟ್ಟೆ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಜೂನ್ 29ರಂದು ಭಟ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
“ಶಾಂತಿಯುತವಾಗಿದ್ದ ಭಟ್ಕಳದಲ್ಲಿ ಕೆಲವರು ದ್ವೇಷದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸ್ ಸಮ್ಮುಖದಲ್ಲೇ ಸಾವಿರಾರು ಮಂದಿ ಸೇರಿ ಮುರಿನಕಟ್ಟೆ ಧ್ವಂಸಗೊಳಿಸಿರುವುದು ಖಂಡನೀಯ. ಸರ್ಕಾರವೇ ಕಟ್ಟೆ ಯನ್ನು ಮರುನಿರ್ಮಾಣ ಮಾಡಿಕೊಡಬೇಕು. ಇಲ್ಲವಾದಲ್ಲಿ ಸಂಘಟನೆಗಳಿಗೆ ಅವಕಾಶ ನೀಡಬೇಕು” ಎಂದರು.
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರ ಬಂಧನವಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರ ಅಪರಾಧಿಗಳು ಹಾಗೂ ಭ್ರಷ್ಟರಿಗೆ ರಕ್ಷಣೆ ನೀಡುತ್ತಿರುವ ಕಾರಣ ಕೆಲವರಿಗೆ ತಾವು ಏನು ಮಾಡಿದರೂ ನಡೆಯುತ್ತದೆ ಎನ್ನುವ ಮನೋಭಾವ ಬೆಳೆದಿದೆ. ಎಲ್ಲರೂ ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತರಾಮ್, ಮುಖಂಡರಾದ ಕೇದಾರ ಕೊಲ್ಲೆ, ನಾರಾಯಣ ದೈಮನೆ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.






