ನಾಡು ನುಡಿಯ ಅಭಿಮಾನ ಸದಾ ಉಳಿಸಿಕೊಳ್ಳಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ

ಭಟ್ಕಳ : ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಸದಾ ಉಳಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ನುಡಿದರು. ಅವರು ಇಲ್ಲಿನ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯೋಗದಲ್ಲಿ 2025 26ನೇ ಸಾಲಿನಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಭಾಷೆಯಲ್ಲಿ ಪ್ರತಿಶತ ನೂರು ಅಂಕಗಳಿಸಿದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿಯೂ ಕೂಡ ಈ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಬೇಕು. ಸಾಹಿತ್ಯ ಪರಿಷತ್ತು ಜಿಲ್ಲೆಯಾ ದ್ಯಂತ ಎಲ್ಲರನ್ನು ಒಳಗೊಳ್ಳುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿರುವುದು ಅಭಿನಂದನಾರ್ಹ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ ಪಠ್ಯ ಪುಸ್ತಕದ ಆಚೆಗೂ ಜ್ಞಾನ ವಿಸ್ತರಿಸ್ಕೊಂಡು ನಿಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಯಬೇಕು. ಮೊಬೈಲನ್ನು ಜ್ಞಾನ ವೃದ್ಧಿಸಿಕೊಳ್ಳಲು ಮಾತ್ರ ಬಳಸಿಕೊಂಡು ದಿನಪತ್ರಿಕೆ, ಸಾಹಿತ್ಯಕ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ನಿವೃತ್ತ ಶಿಕ್ಷಕ ಸಹಕಾರಿ ಧುರೀಣ ಡಿ. ಬಿ. ನಾಯ್ಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳನ್ನು ತಲುಪುವ ಅನೇಕ ಕಾರ್ಯಕ್ರಮವನ್ನು ನಿರಂತರವಾಗಿ ಸಂಘಟಿಸುತ್ತ ಬಂದಿದ್ದು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರನ್ನು ಅಭಿನಂದಿಸುತ್ತಿರುವುದು ಸಂತಸದ ಸಂಗತಿ ಎಂದರು.
ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ ಐದು ವರ್ಷಗಳಿಂದ ಕನ್ನಡ ಭಾಷಾ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ಅಭಿನಂದಿಸುತ್ತ ತಾಲ್ಲೂಕಿನ ಎಲ್ಲ ಪ್ರೌಢ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ತಲುಪುವ ಕಾರ್ಯಕ್ರಮ ಪರಿಷತ್ತಿಗೆ ತುಂಬಾ ಸಂತೋಷವನ್ನು ಕೊಟ್ಟ ಕಾರ್ಯಕ್ರಮ ಎಂದರಲ್ಲದೆ ನಿರಂತರವಾಗಿ ಕನ್ನಡದ ಕಾರ್ಯಗಳನ್ನು ಮಾಡಲು ನೆರವಾದ ಎಲ್ಲರ ಸಹಕಾರವನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್.ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ್ ಕೆರೆಕಟ್ಟೆ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರು ಸಾಂದರ್ಭಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ 36 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ದಿ ನ್ಯೂ ಇಂಗ್ಲಿಷ್ ಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಆರ್.ಡಿ.ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆರೆಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ನಾಯಕ ಉಪಸ್ಥಿತರಿದ್ದರು.
2025- 26ನೆ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕಗಳಿಸಿದ 99 ವಿದ್ಯಾರ್ಥಿಗಳನ್ನು ಹಾಗೂ ಅವರ ಸಾಧನೆಗೆ ಬೆಂಬಲವಾಗಿ ನಿಂತ 25 ಕನ್ನಡ ಭಾಷಾ ಶಿಕ್ಷಕರನ್ನು ಗೌರವಿಸಲಾಯಿತು.
ಕಸಾಪ ಗೌರವಕೋಶಾಧ್ಯಕ್ಷ ಶ್ರೀಧರ್ ಶೇಟ್ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಕಸಾಪ ಕಾರ್ಯಕಾರಿ ಸಮಿತಿಯ ಪೆಟ್ರಿಕ್ ಟೆಲಿಸ್ ಪಾಂಡುರಂಗ ಅಳ್ವೆಗದ್ದೆ, ವಿದ್ಯಾಭಾರತಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ರೂಪ ಖಾರ್ವಿ, ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಮುಖ್ಯಧ್ಯಾಪಕ ಕೆ. ಬಿ. ಮಡಿವಾಳ, ಶ್ರೀವಲಿ ಶಾಲೆಯ ಮುಖ್ಯಧ್ಯಾಪಕಿ ಮಮತಾ ಭಟ್ಕಳ, ಶಕುಂತಲಾ ಎನ್. ನಾಯಕ, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.






