ಮರಕ್ಕೆ ಬೈಕ್ ಢಿಕ್ಕಿ: ಹಿಂಬದಿ ಸವಾರ ಮೃತ್ಯು

ಭಟ್ಕಳ: ಪಟ್ಟಣದ ಬಂದರ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟಿದ್ದು, ಬೈಕ್ ಸವಾರನ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಪ್ರಕಾರ, ಬೆಳಕೆ ಗ್ರಾಮದ ಗರಡಿ ಹಿತ್ತಲಿನ ಸುಮೇದ ನಾರಾಯಣ ನಾಯ್ಕ ಅವರು ಟಿವಿಎಸ್ ಅಪಾಚೆ ಬೈಕ್‌ನಲ್ಲಿ ಸಬ್ಬತ್ತಿಯ ಮಧುರ ಮಂಜುನಾಥ ನಾಯ್ಕ ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಸಂಶುದ್ದೀನ್ ಸರ್ಕಲ್ ಕಡೆಯಿಂದ ಬಂದರ್ ರಸ್ತೆಯತ್ತ ತೆರಳುತ್ತಿದ್ದರು. ಈ ವೇಳೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ಮಧುರ ಮಂಜುನಾಥ ನಾಯ್ಕ ಅವರ ಎದೆ, ಸೊಂಟ ಹಾಗೂ ಕೈಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೈಕ್ ಸವಾರ ಸುಮೇದ ನಾರಾಯಣ ನಾಯ್ಕ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಸಂಬಂಧಿ ಸಚಿನ್ ಗೋವಿಂದ ನಾಯ್ಕ ನೀಡಿದ ದೂರಿನ ಮೇರೆಗೆ ಸುಮೇದ ನಾರಾಯಣ ನಾಯ್ಕ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ರವಿ ಗಾಂಜೇಕರ್ ತನಿಖೆ ನಡೆಸುತ್ತಿದ್ದಾರೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.






