ಭಟ್ಕಳ| ಹೆಡ್ ಕಾನ್‌ಸ್ಟೆಬಲ್ ದೀಪಕ್ ನಾಯಕ್‌ಗೆ ಡಿಜಿ–ಐಜಿಪಿ ಪ್ರಶಂಸಾ ಪದಕ

ಭಟ್ಕಳ: ಭಟ್ಕಳ ಪಟ್ಟಣ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ದೀಪಕ್ ಸದಾನಂದ ನಾಯಕ್ ಅವರಿಗೆ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಕರ್ನಾಟಕ ಪೊಲೀಸ್ ಇಲಾಖೆಯ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ (ಡಿಜಿ ಮತ್ತು ಐಜಿಪಿ) ಡಾ. ಎಂ.ಎ. ಸಲೀಂ ಅವರು ಪದಕ ಪ್ರದಾನ ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 200 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅವರ ಅನುಕರಣೀಯ ಸೇವೆ ಹಾಗೂ ಕಾರ್ಯಕ್ಷಮತೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ದೀಪಕ್ ಸದಾನಂದ ನಾಯಕ್ ಅವರೂ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರಾಗಿದ್ದಾರೆ.
ಭಟ್ಕಳದಲ್ಲಿ 2024ರಲ್ಲಿ ನಡೆದ ಹಾಡುವಳ್ಳಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯ ಮೇಲ್ವಿಚಾರಣೆಯನ್ನು ಸಮರ್ಥವಾಗಿ ನಿರ್ವಹಿಸಿದ ಸೇವೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಂಸಾ ಪದಕ ನೀಡಿ ಗೌರವಿಸಲಾಗಿದೆ.
ಅವರ ಸಾಧನೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.




