ಭಟ್ಕಳದ ರೌಡಿ ಶೀಟರ್ ಜಗದೀಶ ವಾಸು ಮೊಗೇರಗೆ ಆರು ತಿಂಗಳ ಗಡಿಪಾರು

ಭಟ್ಕಳ: ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ತಾಲ್ಲೂಕಿನ ರೌಡಿ ಶೀಟರ್ ಜಗದೀಶ ವಾಸು ಮೊಗೇರ (33) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಹೊರಡಿಸಿರುವ ಆದೇಶ ದಂತೆ, ಜಗದೀಶ ಅವರು ಈ ಅವಧಿಯಲ್ಲಿ ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸಬೇಕು ಎಂದು ಸೂಚಿಸಲಾಗಿದೆ. ಆದೇಶದ ಅನುಸಾರ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಅವರನ್ನು ಮೈಸೂರಿಗೆ ಕರೆದೊಯ್ದು ಅಶೋಕಪುರಂ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ದಾಖಲೆಗಳ ಪ್ರಕಾರ, ಜಗದೀಶ ವಿರುದ್ಧ ಭಟ್ಕಳ ಗ್ರಾಮೀಣ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆ ಯತ್ನ, ಸುಲಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರಿಗೆ ಬೆದರಿಕೆ ಹಾಕುವುದು ಹಾಗೂ ಸಾಕ್ಷಿದಾರರ ಮೇಲೆ ಒತ್ತಡ ಹೇರುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂದು ಪೊಲೀಸ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ಜುಲೈ 29ರಿಂದ ಜಾರಿಗೆ ಬರುವಂತೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ಆದೇಶದಂತೆ, ಮುಂದಿನ ಆರು ತಿಂಗಳ ಕಾಲ ಜಗದೀಶ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಗಡಿಯೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.






