ಭಟ್ಕಳ: ರಸ್ತೆ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಭಟ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ 60 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ9.30ರ ಸುಮಾರಿಗೆ ಭಟ್ಕಳದ ಉಸ್ಮಾನ್ ನಗರದ ಎರಡನೇ ಕ್ರಾಸ್ ಸಮೀಪ ನಡೆದಿದೆ.
ಮೃತರನ್ನು ಗುಳ್ಮಿಯ ನಿವಾಸಿ, ವೃತ್ತಿಯಲ್ಲಿ ಟೈಲರ್ ಆಗಿದ್ದ ಮೊಹಮ್ಮದ್ ಖಾಸಿಂ (60) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಖಾಸಿಂ ಅವರು ಭಟ್ಕಳದ ಹಳೆ ಬಸ್ ನಿಲ್ದಾಣದ ಸಮೀಪದಲ್ಲಿರುವ ತಮ್ಮ ಟೈಲರಿಂಗ್ ಅಂಗಡಿಯನ್ನು ಮುಚ್ಚಿ ಮನೆಗೆ ಮರಳುತ್ತಿದ್ದರು. ಕಿದ್ವಾಯಿ ರಸ್ತೆಯಿಂದ ಗುಳ್ಮಿ ಕಡೆಗೆ ಹೋಗಲು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ, ಮಂಗಳೂರಿನಿಂದ ಹೊನ್ನಾವರ ಕಡೆಗೆ ತೆರಳುತ್ತಿದ್ದ ಕಂಟೇನರ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಖಾಸಿಂ ಅವರು ಸ್ಕೂಟರ್‌ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಕಂಟೇನರ್ ಸ್ಕೂಟರ್ ಅನ್ನು ಕೆಲ ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದ್ದು, ಅದರ ಚಕ್ರಗಳಡಿ ಸಿಲುಕಿದ ಖಾಸಿಂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.
ಸುರಕ್ಷತಾ ಕ್ರಮಕ್ಕೆ ಸ್ಥಳೀಯರ ಆಗ್ರಹ: ಕಿದ್ವಾಯಿ ರಸ್ತೆ, ಗುಳ್ಮಿ ಹಾಗೂ ರೈಲು ನಿಲ್ದಾಣದ ಸಂಪರ್ಕ ರಸ್ತೆಯು ರಾಷ್ಟ್ರೀಯ ಹೆದ್ದಾರಿಯನ್ನು ಸೇರುವ ಸ್ಥಳದಲ್ಲಿ ಸಂಚಾರ ದೀಪಗಳು ಮತ್ತು ದಿಕ್ಕು ಸೂಚಿಸುವ ಫಲಕಗಳಿಲ್ಲದಿರು ವುದೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆದರೆ, ಈ ಮಾರ್ಗದಲ್ಲಿ ಈಗಾಗಲೇ ಅಪಘಾತಗಳು ಸಂಭವಿಸುತ್ತಿವೆ. ಈ ಹಿಂದೆ ಮುರ್ಡೇಶ್ವರ ಬಸ್ತಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಯಲ್ಲಿಯೂ ಇದೇ ರೀತಿಯ ಅಪಘಾತ ಸಂಭವಿಸಿತ್ತು ಎಂದು ಸ್ಥಳೀಯರು ನೆನಪಿಸಿದ್ದಾರೆ.
ಗುಳ್ಮಿ ಮತ್ತು ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಕ್ಷಣ ಅಂಡರ್‌ಪಾಸ್ ನಿರ್ಮಿಸಬೇಕು. ಅಗತ್ಯ ಸ್ಥಳಗಳಲ್ಲಿ ಸಂಚಾರ ದೀಪಗಳು ಹಾಗೂ ದಿಕ್ಕು ಸೂಚಿಸುವ ಫಲಕಗಳನ್ನು ಅಳವಡಿಸಬೇಕು. ಮತ್ತೊಂದು ದೊಡ್ಡ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.






