ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿ.ಯು.ಭಟ್ಟರಿಗೆ ಭಟ್ಕಳ ಪತ್ರಕರ್ತರ ಸಂಘದಿಂದ ಸನ್ಮಾನ

ಭಟ್ಕಳ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೊನ್ನಾವರದ ಹಿರಿಯ ಪತ್ರಕರ್ತ ಜಿ.ಯು. ಭಟ್ಟ ಅವರನ್ನು ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಯು. ಭಟ್ಟ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಆದರೆ, ಪ್ರಶಸ್ತಿಯೊಂದಿಗೆ ಜವಾಬ್ದಾರಿಯೂ ಹೆಚ್ಚಾಗಿದೆ. ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದು, ಜಿಲ್ಲೆಯ ವಿವಿಧ ಸಮಸ್ಯೆ ಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಗಮನಹರಿಸಿ ಸ್ಪಂದಿಸುವಂತೆ ಮನವಿ ಮಾಡಿದ್ದೇನೆ ಎಂದರು.
ಭಟ್ಕಳದ ಪತ್ರಕರ್ತರು ತಮ್ಮ ಮೇಲೆ ಪ್ರೀತಿ, ಅಭಿಮಾನವಿಟ್ಟು ಗೌರವಿಸಿರುವುದು ಮನತುಂಬಿ ಬಂದಿದೆ. ಈ ಸನ್ಮಾನ ತಮ್ಮ ಸಂತಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದರು.
ಹಿರಿಯ ಪತ್ರಕರ್ತ ಸತೀಶಕುಮಾರ ನಾಯ್ಕ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಅರ್ಹ ವ್ಯಕ್ತಿಯೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತಸದ ಸಂಗತಿ. ಅದರಲ್ಲೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ ಈ ಗೌರವ ದೊರೆತಿರುವುದು ವಿಶೇಷ ಸಂತೋಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಯು. ಭಟ್ಟ ಅವರ ಪತ್ನಿ ತಾರಾ ಭಟ್ಟ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ಭಟ್ಟ, ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಉಪಾಧ್ಯಕ್ಷರಾದ ವಿಷ್ಣು ದೇವಡಿಗ ಹಾಗೂ ಎಂ.ಆರ್. ಮಾನ್ವಿ, ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಕಾರ್ಯದರ್ಶಿ ಶೈಲೇಶ ವೈದ್ಯ, ಸಂಘದ ಸದಸ್ಯರಾದ ಪ್ರಸನ್ನ ಭಟ್ಟ, ಈಶ್ವರ ನಾಯ್ಕ, ಲೋಕೇಶ ನಾಯ್ಕ ಹಾಗೂ ಮಂಜು ನಾಯ್ಕ ಉಪಸ್ಥಿತರಿದ್ದರು.






