ಎಬಿ-ಆರ್ಕೆ ಯೋಜನೆ: ರಾಜ್ಯದಲ್ಲಿ 37ನೇ ಸ್ಥಾನ ಪಡೆದ ಭಟ್ಕಳ ತಾಲೂಕು ಆಸ್ಪತ್ರೆ

ಭಟ್ಕಳ: 2026–27ನೇ ಸಾಲಿನ ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ (ಎಬಿ-ಆರ್ಕೆ) ಯೋಜನೆಯ ರಾಜ್ಯಮಟ್ಟದ ಪ್ರಗತಿ ಮೌಲ್ಯಮಾಪನದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಹಾಗೂ ರಾಜ್ಯದಲ್ಲಿ 37ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅರ್ಹ ಫಲಾನುಭವಿಗಳ ನೋಂದಣಿ, ಚಿಕಿತ್ಸಾ ಸೌಲಭ್ಯಗಳ ಸಮರ್ಪಕ ಬಳಕೆ ಹಾಗೂ ಸರ್ಕಾರಿ ಆರೋಗ್ಯ ಯೋಜನೆಗಳ ಪ್ರಯೋಜನಗಳನ್ನು ಜನರಿಗೆ ತಲುಪಿಸುವಲ್ಲಿ ಆಸ್ಪತ್ರೆ ತೋರಿದ ಕಾರ್ಯಕ್ಷಮತೆಗೆ ಈ ಸಾಧನೆ ಲಭಿಸಿದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.
ಈ ಕುರಿತು ಮಾತನಾಡಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅರುಣ ಕುಮಾರ, "ಆಸ್ಪತ್ರೆಯ ಎಲ್ಲಾ ವೈದ್ಯರು, ಶುಶ್ರೂಷಕರು, ವೈದ್ಯಕೀಯ ಮತ್ತು ವೈದ್ಯಕೇತರ ಸಿಬ್ಬಂದಿ, ಆಡಳಿತ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ಪ್ರತಿಯೊಬ್ಬ ಸಿಬ್ಬಂದಿಯ ಸಮರ್ಪಿತ ಸೇವೆ ಮತ್ತು ತಂಡದ ಕಾರ್ಯ ವೈಖರಿಯೇ ಈ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದೆ," ಎಂದು ಹೇಳಿದರು.
"ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಮತ್ತು ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಸೌಲಭ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಆಸ್ಪತ್ರೆ ಮುಂದೆಯೂ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರ ಸಹಕಾರದಿಂದ ಇನ್ನಷ್ಟು ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ," ಎಂದು ಅವರು ತಿಳಿಸಿದರು.
ಆಸ್ಪತ್ರೆಯ ಸಾಧನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.






