ಕಾಂಗ್ರೆಸ್ ಪದಾಧಿಕಾರಿಗಳಾಗಿ ಆರೆಸ್ಸೆಸ್ ಕಾರ್ಯಕರ್ತರ ನೇಮಕ: ‘ಕೈ’ ಕಾರ್ಯಕರ್ತರ ಆಕ್ರೋಶ

ಕಾರವಾರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಆರೆಸ್ಸೆಸ್ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಪಕ್ಷದ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಿದ್ದವೀರೇಶ ಮೇಘರಾಜು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಾ. ರವಿ ಭಟ್ ಬರಗದ್ದೆ ಅವರನ್ನು ಆಯ್ಕೆ ಮಾಡಿರುವುದು ಮೂಲ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ನೇಮಕಗೊಂಡವರು ಶಾಸಕ ಶಿವರಾಮ್ ಹೆಬ್ಬಾರ್ ಅವರ ಆಪ್ತರೆಂದು ಗುರುತಿಸಿಕೊಂಡಿದ್ದು, ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಜಿಲ್ಲಾ ಕಾಂಗ್ರೆಸ್ ನಾಯಕರು ಕೆಪಿಸಿಸಿ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿಭಟನೆಯ ಬಿಸಿ ಏರುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಜಿಲ್ಲಾಧ್ಯಕ್ಷರು ಬನವಾಸಿ ಬ್ಲಾಕ್ ಕಾಂಗ್ರೆಸ್ ಪಟ್ಟಿಗೆ ತಡೆ ನೀಡಿದ್ದಾರಾದರೂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎನ್ನಲಾಗಿದೆ.
ಶಾಸಕ ಶಿವರಾಮ್ ಹೆಬ್ಬಾರ್ ಅವರು ಹೊಸ ಪದಾಧಿಕಾರಿಗಳ ಪರವಾಗಿ ಪಟ್ಟು ಹಿಡಿದಿರುವುದು ಪಕ್ಷದ ಒಳಗಿನ ಭಿನ್ನಮತವನ್ನು ಮತ್ತಷ್ಟು ಹೆಚ್ಚಿಸಿದೆ. ಒಂದು ವೇಳೆ ಆರೆಸ್ಸೆಸ್ ಮೂಲದವರನ್ನು ಹುದ್ದೆಯಿಂದ ತೆಗೆಯದಿದ್ದರೆ ಪಕ್ಷದ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಮೂಲ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.






