Bhatkal | ವೈದ್ಯಾಧಿಕಾರಿ ವಿರುದ್ಧ ಅನಾಮಧೇಯ ದೂರು: ಸರ್ಕಾರಿ ಆಸ್ಪತ್ರೆಗೆ ಡಿಎಂಒ ಭೇಟಿ, ಪರಿಶೀಲನೆ

ಭಟ್ಕಳ: ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ವಿರುದ್ಧ ವಾಟ್ಸ್‌ಆ್ಯಪ್ ಮೂಲಕ ರಾಜ್ಯ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಅನಾಮಧೇಯ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ವೈದ್ಯಾಧಿಕಾರಿ (ಡಿಎಂಒ) ಡಾ.ರಮೇಶ್ ರಾವ್ ಅವರು ಭಟ್ಕಳ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಡಾ.ರಮೇಶ್ ರಾವ್ ಅವರು ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಆಸ್ಪತ್ರೆಯ ಆಡಳಿತ ವ್ಯವಸ್ಥೆ, ವೈದ್ಯಕೀಯ ಸೇವೆಗಳು ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದರು. ಈ ವೇಳೆ ದೂರಿನಲ್ಲಿರುವ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲು ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಎಂಒ ಭೇಟಿ ವಿಷಯ ತಿಳಿದು ಆಸ್ಪತ್ರೆ ಆವರಣಕ್ಕೆ ಸ್ಥಳೀಯರು ಹಾಗೂ ರೋಗಿಗಳ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವೇಳೆ ಹಲವರು ಡಾ. ಅರುಣ್ ಕುಮಾರ್ ಅವರ ಪರವಾಗಿ ಮಾತನಾಡಿ, ವೈದ್ಯರು ರೋಗಿಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸೇವೆಗಳಿಂದ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಿದ್ದು, ಚಿಕಿತ್ಸೆಗಾಗಿ ಹೊರ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಿದೆ ಎಂದು ಸ್ಥಳೀಯರು ಹೇಳಿದರು.
ಅನಾಮಧೇಯ ದೂರಿನ ಆಧಾರದ ಮೇಲೆ ಯಾವುದೇ ಪೂರ್ವನಿರ್ಧಾರಕ್ಕೆ ಬರದೆ, ಆಸ್ಪತ್ರೆಯ ದಾಖಲೆಗಳು ಹಾಗೂ ವಾಸ್ತವಾಂಶಗಳನ್ನು ಆಧರಿಸಿ ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆರೋಗ್ಯ ಇಲಾಖೆಯನ್ನು ಒತ್ತಾಯಿಸಿದರು. ತನಿಖೆಯ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಸೇವೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ, ನಾರಾಯಣ ಖಾರ್ವಿ, ಪರಮೇಶ್ವರ ನಾಯ್ಕ, ಬಾಬು ನಾಯ್ಕ, ಶಂಕರ ನಾಯ್ಕ, ಶ್ರೀಧರ ನಾಯ್ಕ, ಅಪ್ಪು ನಾಯ್ಕ ಸೇರಿದಂತೆ ಸ್ಥಳೀಯರು ಹಾಗೂ ರೋಗಿಗಳ ಸಂಬಂಧಿಕರು ಉಪಸ್ಥಿತರಿದ್ದರು.






