ಭಟ್ಕಳ: ಭಾರೀ ಮಳೆಗೆ ಹೆದ್ದಾರಿ ಪಕ್ಕದ ಪ್ರದೇಶಗಳು ಜಲಾವೃತ; ಮುನ್ನೆಚ್ಚರಿಕಾ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಭಟ್ಕಳ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಬೆಳಗಿನ ಜಾವ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ–66ರ ಅಕ್ಕಪಕ್ಕದ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಯಿತು.
ದಿಢೀರ್ ಸುರಿದ ಮಳೆಯಿಂದ ಹೆದ್ದಾರಿ ಪಕ್ಕದ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವಂತಾಯಿತು. ಕೆಲವೆಡೆ ರಸ್ತೆಗಳ ಮೇಲೆ ಮಳೆ ನೀರು ಹರಿದ ಪರಿಣಾಮ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಮಳೆಗಾಲದ ಆರಂಭದಲ್ಲೇ ಈ ರೀತಿಯ ಸಮಸ್ಯೆ ಎದುರಾಗಿರುವುದು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ನೀರು ನಿಲ್ಲಲು ಪ್ರಮುಖ ಕಾರಣ ಎಂದು ಸಾರ್ವಜನಿಕರು ದೂರಿದ್ದಾರೆ.
ಪೂರ್ಣ ಪ್ರಮಾಣದ ಮಳೆಗಾಲ ಆರಂಭವಾಗುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹೆದ್ದಾರಿ ಅಕ್ಕಪಕ್ಕದ ಚರಂಡಿಗಳನ್ನು ಶುದ್ಧೀಕರಿಸಿ, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇತ್ತೀಚಿನ ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ವಾತಾವರಣ ಮುಂದುವರಿದಿದೆ. ಕರಾವಳಿ ಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.




