Bhatkal | ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಓರ್ವ ಆರೋಪಿಯ ಬಂಧನ

ಭಟ್ಕಳ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಯುವಕನೋರ್ವನನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಮಗ್ದಮ್ ಕಾಲನಿ ನಿವಾಸಿ ಮುಹಮ್ಮದ್ ದ್ಯಾನಿಶ್ (30) ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೇ 17ರಂದು ಬೆಳಗಿನ ಜಾವ 4:15ರ ಸುಮಾರಿಗೆ ಹಲ್ಯಾಣಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಕಾರಿನಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಸುತ್ತಿರುವುದು ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ವಾಹನವನ್ನು ಗಮನಿಸಿದ ಆರೋಪಿಗಳು, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ನಾಲ್ವರು ಭಾಗಿಯಾಗಿರುವುದು ತಿಳಿದುಬಂದಿದೆ. ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಸೈ ಭರಮಪ್ಪ ಬೆಳಗಲಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.




