ಭಟ್ಕಳ: ‘ಮುರಿನ್ ಕಟ್ಟೆ’ ವಿವಾದ ಹಿನ್ನೆಲೆ; ನಿಷೇಧಾಜ್ಞೆ ಜಾರಿ

ಭಟ್ಕಳ: ತಾಲೂಕಿನ ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ–2023ರ ಕಲಂ 163 (ಹಳೆಯ ಸಿಆರ್‌ಪಿಸಿ ಕಲಂ 144) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ರವಿವಾರ ನಡೆದ ಉದ್ವಿಗ್ನ ಘಟನೆಯ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಜಾರಿಗೊಂಡಿದ್ದು, ಮೇ 25ರ ಬೆಳಿಗ್ಗೆ 6 ಗಂಟೆಯಿಂದ ಮೇ 27ರ ಬೆಳಿಗ್ಗೆ 6 ಗಂಟೆಯವರೆಗೆ ಇದು ಜಾರಿಯಲ್ಲಿರಲಿದೆ.
ಆದೇಶದ ಪ್ರಕಾರ, ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಮೆರವಣಿಗೆ ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ರವಿವಾರ ಭಟ್ಕಳದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಸಾರ್ವಜನಿಕರು ಶಾಂತಿ ಕಾಪಾಡಿ, ಆಡಳಿತಕ್ಕೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.






