ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಆ.18ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಟ್ಕಳ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ಕೇಂದ್ರವು ಉತ್ತರ ಕನ್ನಡ ಜಿಲ್ಲೆಯಲ್ಲಿ ಆ.19ರವರೆಗೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಆ.18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಈ ಆದೇಶವು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಮತ್ತು ದಾಂಡೇಲಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳಿಗೆ ಅನ್ವಯಿಸುತ್ತದೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಮ್) ಅಡಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಭಾ.ಅ.ಸೇ. ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಈ ರಜೆಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸಂಬಂಧಿತ ಇಲಾಖೆಗಳಿಗೆ ಸೂಚಿಸಲಾಗಿದೆ. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರವಾರ/ಶಿರಸಿ, ಮತ್ತು ಉಪನಿರ್ದೇಶಕರು, ಪದವಿಪೂರ್ವ ಕಾಲೇಜು ಇಲಾಖೆಯವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ.
ಭಾರೀ ಮಳೆಯಿಂದಾಗಿ ಭೂಕುಸಿತ, ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆ, ಮತ್ತು ಸಂಚಾರದಲ್ಲಿ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.







