HONNAVARA | ಮರಕ್ಕೆ ಢಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ: ಇಬ್ಬರು ಸಜೀವ ದಹನ

ಕಾರವಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನಗೊಂಡ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ರಭಸವಾಗಿ ಢಿಕ್ಕಿ ಹೊಡೆದು, ನಂತರ ಸಮೀಪದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದರ ನಂಬರ್ ಪ್ಲೇಟ್ ಕೂಡ ನಾಶವಾಗಿದೆ. ಈ ಕಾರಣದಿಂದಾಗಿ ಕಾರು ಮತ್ತು ಮೃತರ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು.
ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆಯ ಮೂಲಗಳ ಪ್ರಕಾರ, ಮೃತರನ್ನು ಸಿದ್ದಾಪುರದವರೆಂದು ಶಂಕಿಸಲಾಗಿದ್ದು, ಈ ಕುರಿತು ಅವರ ಸಂಬಂಧಿಕರಿಗೆ ಪೊಲೀಸರು ಮಾಹಿತಿ ರವಾನಿಸಿದ್ದಾರೆ.
ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.





