ಯಲ್ಲಾಪುರ: ಕೆಟ್ಟು ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಮೂವರು ಮೃತ್ಯು, ಏಳು ಮಂದಿಗೆ ಗಾಯ

ಯಲ್ಲಾಪುರ: ಯಲ್ಲಾಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹಿಟ್ಟಿನಬೈಲ್ ಸಮೀಪದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ನೀಲವ್ವ (38) ಮತ್ತು ಗಿರಿಜವ್ವ (43) ಎಂದು ಗುರುತಿಸಲಾಗಿದ್ದು, ಮೃತಪಟ್ಟ ಇನ್ನೊಬ್ಬ ಪುರುಷನ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನೆಯ ವಿವರ:
ಬಾಗಲಕೋಟೆಯ ಅಮ್ಮನಗುಡ್ಡದಿಂದ ಮಂಗಳೂರಿನತ್ತ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್, ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಬಳಿ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕೇರಳ ಮೂಲದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಬಸ್‌ನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್‌ಪಿ, ಯಲ್ಲಾಪುರ ಸಿಪಿಐ ಮತ್ತು ಪಿಎಸ್‌ಐ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





