ಭಟ್ಕಳ: ಶಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಒರಿಯಂಟೇಶನ್ ಕಾರ್ಯಕ್ರಮ

ಭಟ್ಕಳ: ಶಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರಿಗಾಗಿ ಒರಿಯಂಟೇಶನ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೈಯಕ್ತಿಕ ಬೆಳವಣಿಗೆಯ ಗುರಿಯನ್ನು ಕೇಂದ್ರೀಕರಿಸಿತ್ತು.
ಕಾರ್ಯಕ್ರಮದಲ್ಲಿ ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಕಾಝಿ, ಸಂಸ್ಥೆಯ ಮಾಜಿ ಅಧ್ಯಕ್ಷ ಕಾದಿರ್ ಮೀರಾ ಪಟೇಲ್ ಮತ್ತು ಪ್ರಾಂಶುಪಾಲ ಲಿಯಾಕತ್ ಅಲಿ ಮಾತನಾಡಿದರು. ಶಮ್ಸ್ ಪದವಿ ಪೂರ್ವ ಕಾಲೇಜು ಕೇವಲ ಒಂದು ಶೈಕ್ಷಣಿಕ ಸಂಸ್ಥೆಯಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಕೇಂದ್ರಬಿಂದುವಾಗಿದೆ ಎಂದು ಅವರು ಒತ್ತಿ ಹೇಳಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ಶಿಸ್ತು ಮತ್ತು ಜವಾಬ್ದಾರಿಯನ್ನು ಬೆಳೆಸುವ ಗುರಿಯನ್ನು ಕಾಲೇಜು ಹೊಂದಿದೆ ಎಂದು ಅವರು ತಿಳಿಸಿದರು.
ಇಂಜಿನೀಯರ್ ನಝೀರ್ ಆಹ್ಮದ್ ಕಾಝಿ ಮಾತನಾಡುತ್ತ, "ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನ ದಲ್ಲಿ ಗುರಿಗಳನ್ನು ನಿಗದಿಪಡಿಸಿಕೊಂಡು, ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಯಶಸ್ಸನ್ನು ಸಾಧಿಸಬೇಕು. ಶಮ್ಸ್ ಕಾಲೇಜು ಇದಕ್ಕೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ," ಎಂದು ಭರವಸೆ ನೀಡಿದರು. ಪ್ರಾಂಶುಪಾಲ ಲಿಯಾಕತ್ ಅಲಿ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳಿಗೆ ಒದಗಿಸಲಾಗುವ ವಿಶೇಷ ತರಬೇತಿಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಶಮ್ಸ್ ಕಾಲೇಜಿನ ಉಪನ್ಯಾಸಕ ವರ್ಗವು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕಾಲೇಜನ್ನು ಆಯ್ದುಕೊಂಡ ವಿದ್ಯಾರ್ಥಿಗಳನ್ನು ಮತ್ತು ಅವರ ಪಾಲಕರನ್ನು ಅಭಿನಂದಿಸಿತು. ಈ ಸಂದರ್ಭ ದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ನಿಯಮಾವಳಿಗಳು, ಶೈಕ್ಷಣಿಕ ವೇಳಾಪಟ್ಟಿ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಜೊತೆಗೆ, ಪಾಲಕರಿಗೆ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಲಹೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸೈಯ್ಯದ್ ಖುತುಬ್ ಬರ್ಮಾವರ್ ನದ್ವಿ, ಪಿಯುಸಿ ಕೋಅರ್ಡಿನೇಟರ್ ಫಹಮಿದಾ ಖಿಜರ್, ಮುಹಮ್ಮದ್ ರಝಾ ಮಾನ್ವಿ ಮತ್ತು ಇತರ ಗಣ್ಯರು ಉಪಸ್ಥಿತರಿ ದ್ದರು. ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಝಯ್ಯಾನ್ ಬಂಗಾಲಿ ಮತ್ತು ಇಫ್ಹಾಮ್ ಮುಸ್ಬಾ ಕಾರ್ಯಕ್ರಮವನ್ನು ನಿರೂಪಿಸಿ, ಎಲ್ಲರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಪಾಲಕರಿಗೆ ಕಾಲೇಜಿನ ಶಿಕ್ಷಕರೊಂದಿಗೆ ಸಂವಾದ ನಡೆಸಲು ಅವಕಾಶ ಕಲ್ಪಿಸಲಾ ಯಿತು, ಇದರಿಂದ ಅವರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸಾಧ್ಯವಾಯಿತು.







