ಯಲ್ಲಾಪುರ: ಲಾರಿ–ಕ್ರೂಸರ್ ಮುಖಾಮುಖಿ ಢಿಕ್ಕಿ; ಆರು ಮಂದಿ ಮೃತ್ಯು, ಮೂವರು ಗಂಭೀರ

ಯಲ್ಲಾಪುರ: ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಅರಬೈಲ್ ಘಟ್ಟದ ಬಳಗಾರ್ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26), ಸಂಜೀವ ಅಂಗಡಿ (33) ಹಾಗೂ ಮಂಜುನಾಥ ಚುಲಕಿ ಎಂದು ಗುರುತಿಸಲಾಗಿದೆ.
ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ವಾಹನದಲ್ಲಿ ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆಗೆ ತೂಫಾನ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ ವಾಹನದೊಳಗೆ ಸಿಲುಕಿದ್ದವರನ್ನು ಹೊರತೆಗೆಯಲಾಯಿತು. ಗಾಯಗೊಂಡ ಶಿವರಾಜ್ ದುರ್ಗಪ್ಪ ಮಡಿವಾಳ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ ಹಾಗೂ ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದವರು ಎನ್ನಲಾಗಿದೆ. ಗೆಳೆಯರ ಗುಂಪು ಧರ್ಮಸ್ಥಳ ಹಾಗೂ ಮಂಗಳೂರು ಕಡೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಅರಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ ಅವರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನುಜ್ಜುಗುಜ್ಜಾಗಿದ್ದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






