ವಿಜಯನಗರದಲ್ಲಿ 50 ಕೋಟಿ ರೂ. ವೆಚ್ಚದ ಹೊಸ ವಿದ್ಯುತ್ ಉಪಕೇಂದ್ರ ನಿರ್ಮಿಸಲಾಗುವುದು : ಶಾಸಕ ಗವಿಯಪ್ಪ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ದೀರ್ಘಕಾಲದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಎರಡು ಹೊಸ ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಶಾಸಕ ಹೆಚ್.ಆರ್. ಗವಿಯಪ್ಪ ಹೇಳಿದರು.
ಹೊಸಪೇಟೆ ನಗರ ಹಾಗೂ ತಾಲೂಕಿನ ಹೊರವಲಯದ ನಾಗೇನಹಳ್ಳಿಯಲ್ಲಿ ವಿದ್ಯುತ್ ಉಪಕೇಂದ್ರಗಳ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪದೇಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯ ಸಮಸ್ಯೆ ನಿವಾರಣೆಗೆ ಎರಡು ಬೃಹತ್ ಸಬ್‌ಸ್ಟೇಷನ್‌ಗಳ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ನಾಗೇನಹಳ್ಳಿ ಸಬ್‌ಸ್ಟೇಷನ್‌ಗೆ 23.26 ಕೋಟಿ ರೂ. ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಗರ ಪ್ರದೇಶದ ಬೇಡಿಕೆಗೆ ಅನುಗುಣವಾಗಿ 27 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಸಬ್‌ಸ್ಟೇಷನ್ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ರಾಯರಕೆರೆಯ ಹಳೆಯ ಸಬ್‌ಸ್ಟೇಷನ್‌ನ್ನು 2×20 ಎಂವಿಎ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗುತ್ತಿದೆ. ಈ ಯೋಜನೆಗಳಿಂದ ಜನತೆಗೆ 24x7 ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ ಎಂದು ಹೇಳಿದರು.
2027ರ ಸೆಪ್ಟೆಂಬರ್ ವೇಳೆಗೆ ಕಾಮಗಾರಿಗಳು ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ಕಾಮಗಾರಿ ಪೂರ್ಣವಾದ ಬಳಿಕ ತೋರಣಗಲ್ಲು ಹಾಗೂ ಮುನಿರಾಬಾದ್ ಲೈನ್‌ಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಸ್ಥಳೀಯ ಮಟ್ಟದಲ್ಲೇ ವಿದ್ಯುತ್ ನಿರ್ವಹಣೆ ಸುಲಭವಾಗಲಿದೆ ಎಂದು ವಿವರಿಸಿದರು.
ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಕ್ರಮ :
ದಶಕಗಳಿಂದ ಸ್ಥಗಿತಗೊಂಡಿರುವ ಸಕ್ಕರೆ ಕಾರ್ಖಾನೆಯನ್ನು ರೈತರ ಆಶಯದಂತೆ ಪುನಶ್ಚೇತನಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ತಮಿಳುನಾಡು ಮಾದರಿಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಕಾರ್ಖಾನೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗವಿಯಪ್ಪ ತಿಳಿಸಿದರು.
ಇದರಿಂದ ರೈತರಿಗೆ ಕಬ್ಬಿಗೆ ಸಮರ್ಪಕ ಬೆಲೆ ದೊರೆಯುವುದಲ್ಲದೆ, ಕಟಾವು ಪ್ರಕ್ರಿಯೆಯೂ ಸಕಾಲದಲ್ಲಿ ನಡೆಯಲಿದೆ ಎಂದು ಹೇಳಿದರು.
ಶೀಘ್ರದಲ್ಲೇ ಜಿಲ್ಲಾಸ್ಪತ್ರೆ ಉದ್ಘಾಟನೆ :
ಜಿಲ್ಲೆಯ ಬಹುಕಾಲದ ಕನಸಾದ ಸುಸಜ್ಜಿತ ಜಿಲ್ಲಾ ಆಸ್ಪತ್ರೆಯ ಉದ್ಘಾಟನೆ ಶೀಘ್ರದಲ್ಲೇ ನಡೆಯಲಿದೆ. ಆಸ್ಪತ್ರೆಯ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ವೈದ್ಯಕೀಯ ಉಪಕರಣಗಳ ಖರೀದಿ ಹಾಗೂ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಹೇಳಿದರು.
ಮುಂದಿನ 15ರಿಂದ 20 ದಿನಗಳೊಳಗೆ ಆಸ್ಪತ್ರೆ ಉದ್ಘಾಟನೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಶಿವಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಡಿವೈಎಸ್ಪಿ ಡಾ. ಮಂಜುನಾಥ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎಂ. ನಟರಾಜ್, ತಹಶೀಲ್ದಾರ್ ಶೃತಿ ಎಂ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಲಂ ಭಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






