ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ವಿಜಯನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಹೊಸಪೇಟೆಯ ಅಮರಾವತಿ ಪ್ರವಾಸಿ ಮಂದಿರದ ಎದುರು ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಬಡವರ ಬದುಕಿಗೆ ಆಸರೆಯಾಗಿರುವ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವ ಈ ಮಹತ್ವದ ಯೋಜನೆಗೆ ಯುಪಿಎ ಸರಕಾರ ನೀಡಿದ ಹೆಸರನ್ನು ಅಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ನಾಯಕರು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೀರಾಜ್ ಶೇಕ್ ಅವರ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ರಾಜ್ಯದ ಪ್ರಭಾವಿ ನಾಯಕರು, ಜಿಲ್ಲಾ ಸಚಿವರಾದ ಜಮೀರ್ ಅಹಮ್ಮದ್ ಖಾನ್, ಸಂಸದರಾದ ಇ. ತುಕಾರಾಂ, ಶಾಸಕರಾದ ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್, ಲತಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.





