ಎಸ್‌ಐಆರ್ ವಿರೋಧಿ ಹೋರಾಟ ಹತ್ತಿಕ್ಕುವ ಪ್ರಯತ್ನ ಖಂಡಿಸಿ ಹೊಸಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ದೆಹಲಿಯಲ್ಲಿ ನಡೆಯುತ್ತಿರುವ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ನೀತಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಹೊಸಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಬ್ಲಾಕ್‌ಗಳಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಈ ಹೋರಾಟ ನಡೆಯಿತು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ‘ಓಟ್ ಚೋರ್’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್ ಪ್ರಕ್ರಿಯೆ ಹಾಗೂ ಅದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ಖಂಡಿಸಿದರು.
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದರು. ಬಳಿಕ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಅಲ್ಲಾ ಭಕ್ಷಿ, ಬಣ್ಣದ ಮನೆ ಸೋಮಶೇಖರ್, ಕೆ. ಮಹೇಶ್ ಕುಮಾರ್, ಮಂಜುನಾಥ್, ಬಡವಲಿ, ಸಣ್ಣ ಮಾರೆಪ್ಪ, ಶಿವಕುಮಾರ್, ಯೋಗಲಕ್ಷ್ಮೀ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.






