ಸಿದ್ದರಾಮಯ್ಯ ಪ್ರತಿಮೆ ಮರುಸ್ಥಾಪನೆಗೆ ಆಗ್ರಹ: ಹೊಸಪೇಟೆಯಲ್ಲಿ ಕುರುಬ ಸಮಾಜದಿಂದ ಮೌನ ಪ್ರತಿಭಟನೆ

ಹೊಸಪೇಟೆ: ಕಲಬುರಗಿ ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪಿಸಿ ಕೆಲವೇ ಗಂಟೆಗಳಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವುದನ್ನು ಖಂಡಿಸಿ, ಹೊಸಪೇಟೆಯಲ್ಲಿ ಕುರುಬ ಸಮಾಜದ ವತಿಯಿಂದ ಮೌನ ಪ್ರತಿಭಟನೆ ನಡೆಯಿತು.
ನಗರದ ತಾಲೂಕು ದಂಡಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುರುಬ ಸಮಾಜದ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಂಡು, ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಸೆ.16ರ ರಾತ್ರಿ ಸಿದ್ದರಾಮಯ್ಯ ಅವರ ಸುಮಾರು 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಪ್ರತಿಮೆ ಸ್ಥಾಪನೆಗೆ ಅಗತ್ಯ ಅನುಮತಿ ಪಡೆಯಲಾಗಿಲ್ಲ ಎಂಬ ಕಾರಣಕ್ಕೆ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರತಿಮೆಯನ್ನು ತೆರವುಗೊಳಿಸಿದ್ದರು.
ಈ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ಅವರು ಅಹಿಂದ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ ನಾಯಕರು. ಎಲ್ಲ ಧರ್ಮ ಹಾಗೂ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಸಾಗಿದ ನಾಯಕನಾಗಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಈ ಹಿಂದೆ ಸ್ಥಾಪಿಸಲಾಗಿದ್ದ ಸ್ಥಳದಲ್ಲೇ ಮತ್ತೊಮ್ಮೆ ಕಾನೂನುಬದ್ಧವಾಗಿ ಮರುಸ್ಥಾಪಿಸಬೇಕು. ಪ್ರತಿಮೆ ಮರುಸ್ಥಾಪನೆಗೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಕುರುಬ ಸಮಾಜದ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಇದಲ್ಲದೆ, ಪ್ರತಿಮೆ ತೆರವುಗೊಳಿಸಿದ ವಿಚಾರದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಕ್ರಮದ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕುರುಬ ಸಮಾಜದ ಹಿರಿಯ ಮುಖಂಡ ಹಾಗೂ ಅಧ್ಯಕ್ಷ ಕೊಟ್ರೇಶ್, ಕುರಿ ಶಿವಮೂರ್ತಿ, ಬುಡ್ಡಿ ಬಸವರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






