ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ‍್ಯ, ನ್ಯಾಯ ಹಾಗೂ ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿದೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳು ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಭಾರತೀಯ ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಒದಗಿಸುವ ಮಹತ್ವದ ಜವಾಬ್ದಾರಿಯನ್ನು ಸಂವಿಧಾನ ನಿರ್ವಹಿಸುತ್ತಿದೆ. ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯಗಳನ್ನು ಅರಿತು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಮಾಜದಲ್ಲಿ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸಿಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಭಾರತೀಯ ಸಂವಿಧಾನವನ್ನು 1949ರ ನವೆಂಬರ್ 26ರಂದು ಸಂವಿಧಾನ ಸಭೆ ಅಂಗೀಕರಿಸಿದ ಸ್ಮರಣಾರ್ಥ ಪ್ರತಿವರ್ಷ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವುದರ ಜೊತೆಗೆ ಸಂವಿಧಾನದ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಆಶಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಈ ದಿನಾಚರಣೆಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಜೀಮಾ ಬಾನು ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ. ಕಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಪಾಷಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜಗಳ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






