ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಕೆ.ಎಸ್. ಬಸವಂತಪ್ಪ
79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ

ವಿಜಯನಗರ (ಹೊಸಪೇಟೆ) : ಹೈದರಾಬಾದ್ ನಿಜಾಮರ ದಬ್ಬಾಳಿಕೆಯ ಆಡಳಿತದಿಂದ ಕಲ್ಯಾಣ ಕರ್ನಾಟಕ ಭಾಗವು ವಿಮೋಚನೆಗೊಂಡು 79 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1947ರ ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯ ಪಡೆದರೂ, ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸ್ವಾತಂತ್ರ್ಯ ದೊರೆಯಲಿಲ್ಲ. ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ನಡೆದ ಹೋರಾಟ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದಿಟ್ಟ ನಿರ್ಧಾರದ ಫಲವಾಗಿ 1948ರ ಸೆಪ್ಟೆಂಬರ್ 17ರಂದು ಈ ಪ್ರದೇಶ ಭಾರತ ಒಕ್ಕೂಟಕ್ಕೆ ವಿಲೀನಗೊಂಡಿತು ಎಂದು ಅವರು ಸ್ಮರಿಸಿದರು.
ಸ್ವಾಮಿ ರಮಾನಂದ ತೀರ್ಥ, ಡಾ. ಮೇಲ್ಕೋಟೆ, ಅನ್ನದಾನಯ್ಯ ಪುರಾಣಿಕ, ಪ್ರಭುರಾಜ ಪಾಟೀಲ್, ಶಿವಮೂರ್ತಿ ಸ್ವಾಮಿ ಅಳವಂಡಿ ಸೇರಿದಂತೆ ಹಲವು ಹೋರಾಟಗಾರರ ತ್ಯಾಗವನ್ನು ಸಚಿವರು ನೆನಪಿಸಿದರು. “ಆಪರೇಷನ್ ಪೋಲೊ” ಕಾರ್ಯಾಚರಣೆಯ ಮೂಲಕ ನಿಜಾಮರ ಆಡಳಿತ ಅಂತ್ಯಗೊಂಡು ಕಲ್ಯಾಣ ಕರ್ನಾಟಕ ವಿಮೋಚನೆಗೊಂಡಿತು ಎಂದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ತಿದ್ದುಪಡಿ ಜಾರಿಗೊಂಡಿದ್ದು, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಸ್ಥಳೀಯರಿಗೆ ಮೀಸಲಾತಿ ಸೇರಿದಂತೆ ಹಲವು ಅವಕಾಶಗಳು ದೊರೆತಿವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.
ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಮೂಲಸೌಕರ್ಯ ಹಾಗೂ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಮುಂದುವರಿಯಲಿದೆ ಎಂದು ಭರವಸೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು :
ಉತ್ಸವದ ಅಂಗವಾಗಿ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಕಲ್ಯಾಣ ಕರ್ನಾಟಕದ ಇತಿಹಾಸ ಬಿಂಬಿಸುವ ನೃತ್ಯ ಮತ್ತು ಕಿರು ನಾಟಕಗಳನ್ನು ಪ್ರದರ್ಶಿಸಿದರು. ಹೈದರಾಬಾದ್ ಕರ್ನಾಟಕ ವಿಮೋಚನೆಯ ಯಶೋಗಾಥೆಯನ್ನು ವಿದ್ಯಾರ್ಥಿಗಳು ಮನಮುಟ್ಟುವ ರೀತಿಯಲ್ಲಿ ನಿರೂಪಿಸಿದರು.
ಆಕರ್ಷಕ ಪಥಸಂಚಲನ :
ಕಾರ್ಯಕ್ರಮದಲ್ಲಿ ಪೊಲೀಸ್, ಮಹಿಳಾ ಪೊಲೀಸ್, ಹೋಮ್‌ಗಾರ್ಡ್, ಎನ್‌ಸಿಸಿ, ಸೇವಾದಳ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಶಿಸ್ತುಬದ್ಧ ಪಥಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದವು.
ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಆರ್. ಗವಿಯಪ್ಪ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ನಾಯ್ಕ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವರ್, ಎಸ್‌ಪಿ ಜಾಹ್ನವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






