Harapanahalli | ಕೆಂಚಪುರ ಗ್ರಾಮದಲ್ಲಿ ಜ್ವರ ಪ್ರಕರಣ: ಆರೋಗ್ಯ ಇಲಾಖೆ, ಗ್ರಾ.ಪಂ. ಅಧಿಕಾರಿಗಳಿಂದ ಪರಿಶೀಲನೆ

ಹರಪನಹಳ್ಳಿ: ತಾಲ್ಲೂಕಿನ ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಪುರ ಗ್ರಾಮದಲ್ಲಿ ಇತ್ತೀಚೆಗೆ ಹವಾಮಾನ ವೈಪರೀತ್ಯದಿಂದ ಹಲವರಿಗೆ ಜ್ವರ ಕಾಣಿಸಿಕೊಂಡಿದ್ದು, ಕೆಲವರು ಕೈಕಾಲು ನೋವಿನಿಂದಲೂ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಗ್ರಾಮದಲ್ಲಿ ಹಲವರಿಗೆ ಜ್ವರ ಕಾಣಿಸಿಕೊಂಡಿರುವ ವಿಷಯವನ್ನು ಸ್ಥಳೀಯ ಮುಖಂಡರಾದ ಫಣಿಯಾಪುರ ಲಿಂಗರಾಜ್, ಏಕಾಂತಪ್ಪ ಹಾಗೂ ಬಸವರಾಜ ಅವರು ಉಚ್ಚಂಗಿದುರ್ಗದ ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್. ರಾಜೇಶ್ ಮತ್ತು ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಹೇಮಂತ್ ಕುಮಾರ್ ಅವರ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಗ್ರಾಮ ಪಂಚಾಯಿತಿ ವತಿಯಿಂದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬ್ಲೀಚಿಂಗ್ ಪೌಡರ್ ಸಿಂಪಡಿಸುವುದರ ಜೊತೆಗೆ ಫಾಗಿಂಗ್ ಮಾಡಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಪರೀಕ್ಷೆಗಳನ್ನು ಕೈಗೊಂಡಿದ್ದಾರೆ. ಪರಿಶೀಲನೆಯಲ್ಲಿ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಹವಾಮಾನ ವೈಪರೀತ್ಯದಿಂದ ಜ್ವರ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ರಾಜೇಶ್ ಎಸ್.ಎಚ್. ಮತ್ತು ಎಂ.ಆರ್. ನಾಗರಾಜ್ ಅವರು ಗ್ರಾಮಸ್ಥರಿಗೆ ಆರೋಗ್ಯ ಜಾಗೃತಿ ಮೂಡಿಸಿದರು. ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರನ್ನು ಡ್ರಮ್, ಟ್ಯಾಂಕ್ ಸೇರಿದಂತೆ ವಿವಿಧ ಪಾತ್ರೆಗಳಲ್ಲಿ ಸಂಗ್ರಹಿಸುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಪಾತ್ರೆಗಳನ್ನು ನಿಯಮಿತವಾಗಿ ಶುಚಿಗೊಳಿಸಿ, ಸೊಳ್ಳೆಗಳ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಮನೆಗಳ ಒಳಭಾಗದಲ್ಲಿಯೂ ಫಾಗಿಂಗ್ ನಡೆಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅಲ್ಲದೆ, ಗ್ರಾಮಸ್ಥರಿಗೆ ತಕ್ಷಣ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಆರೋಗ್ಯ ಕೇಂದ್ರದ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಗ್ರಾಮದಲ್ಲಿ ನಿಯೋಜಿಸಲಾಗಿದೆ. ಜ್ವರ ಅಥವಾ ಇತರೆ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಫಣಿಯಾಪುರ ಲಿಂಗರಾಜ್, ಏಕಾಂತಪ್ಪ, ಬಸವರಾಜ್, ಎನ್.ಆರ್. ದ್ಯಾಮಪ್ಪ, ಮಂಜುನಾಥ, ಚಂದ್ರಪ್ಪ, ವಸಂತ, ರೇವಪ್ಪ, ರುಷೇಬೇಂದ್ರಪ್ಪ, ಮಹಾಂತೇಶ, ಮಹಿಳಾ ಸಂಘದ ಶೋಭಾ, ವನಜಾಕ್ಷಮ್ಮ, ಅಂಜಿನಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.






