Harapanahalli | ಕಲಬುರಗಿ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಕ್ರೀಡಾಕೂಟಕ್ಕೆ ಚಾಲನೆ
ಕ್ರೀಡೆ ದೈಹಿಕ ಸಾಮರ್ಥ್ಯ, ಶಿಸ್ತು ಮತ್ತು ಆತ್ಮವಿಶ್ವಾಸ ಹೆಚ್ಚಿಸುತ್ತದೆ : ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ

ಹರಪನಹಳ್ಳಿ: ಕ್ರೀಡೆ ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ನಿರಂತರ ಕ್ರೀಡಾ ಚಟುವಟಿಕೆಗಳು ದೈಹಿಕ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ವಿಜಯನಗರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಿಂದ ದೇಹಕ್ಕೆ ಶಕ್ತಿ ದೊರೆಯುವುದರ ಜೊತೆಗೆ ಮನಸ್ಸಿಗೆ ಶಾಂತಿ, ಶಿಸ್ತು ಮತ್ತು ಉತ್ಸಾಹ ಲಭಿಸುತ್ತದೆ. ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವಿಕೆ ಕಡಿಮೆಯಾಗುತ್ತಿದ್ದರೂ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ರಾಜ್ಯಕ್ಕೆ ಕೀರ್ತಿ ತರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಕ್ರೀಡಾಕೂಟದ ನಿರ್ಣಾಯಕರು ಯಾವುದೇ ಪಕ್ಷಪಾತಕ್ಕೆ ಅವಕಾಶ ನೀಡದೆ, ನಿಯಮಾನುಸಾರ ನ್ಯಾಯಯುತವಾಗಿ ತೀರ್ಪು ನೀಡಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕಲಬುರಗಿ ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಯಸ್ಸಿನ ಆಧಾರದ ಮೇಲೆ ಎರಡು ವಿಭಾಗಗಳಾಗಿ ವಿಂಗಡಿಸಿ ಕ್ರೀಡಾಕೂಟ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀಕಾಂತ್ ವಾಲ್ಮೀಕಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ. ಷಣ್ಮುಖಪ್ಪ, ಜಿಲ್ಲಾ ಶಿಕ್ಷಣಾಧಿಕಾರಿ ಪರಸಪ್ಪ ಭಜಂತ್ರಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕೆ. ನಾಗರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಪದ್ಮರಾಜ್ ಜೈನ್, ಜಿಲ್ಲಾ ಸಹ ಕಾರ್ಯದರ್ಶಿ ಬಿ. ರಾಜಶೇಖರ, ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ ಪೂಜಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.






