Harapanahalli | ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಕಾರ್ಯ ಶ್ಲಾಘನೀಯ: ಎಂ.ವಿ.ಅಂಜಿನಪ್ಪ

ಹರಪನಹಳ್ಳಿ : ತಾಲೂಕಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಚುರುಕುಗೊಂಡಿದ್ದು, ಹರಪನಹಳ್ಳಿ ತಾಲೂಕಿನಲ್ಲೂ ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಮೂಲಕ ಮತದಾರರ ಹಕ್ಕುಗಳನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
ಶಿಕ್ಷಕರನ್ನು ಹೊರತುಪಡಿಸಿ ಬೇರೆ ಯಾವುದೇ ಇಲಾಖೆಗೆ ಎಸ್‌ಐಆರ್ ಪ್ರಕ್ರಿಯೆಯ ಜವಾಬ್ದಾರಿ ವಹಿಸಿದ್ದರೆ ಅದನ್ನು ಅಷ್ಟೇ ಸಮರ್ಥವಾಗಿ ನಿರ್ವಹಿಸುವುದು ಕಷ್ಟವಾಗುತ್ತಿತ್ತು. ಆದರೆ ಶಿಕ್ಷಕರು ತಮ್ಮ ಶೈಕ್ಷಣಿಕ ಕರ್ತವ್ಯಗಳ ಜೊತೆಗೆ ಎಸ್‌ಐಆರ್ ಕಾರ್ಯವನ್ನೂ ಜವಾಬ್ದಾರಿಯಿಂದ ನಿರ್ವಹಿಸಿ ಮತದಾರರ ಹಕ್ಕುಗಳನ್ನು ಕಾಪಾಡುವಲ್ಲಿ ಕರ್ತವ್ಯನಿಷ್ಠೆ ಮೆರೆದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಬಿಎಲ್‌ಒಗಳು ಹಾಗೂ ಶಿಕ್ಷಕರ ಸೇವೆ ಶ್ಲಾಘನೀಯವಾಗಿದ್ದು, ಅವರ ಕಾರ್ಯಕ್ಕೆ ಎಲ್ಲರೂ ಕೃತಜ್ಞತೆ ಸಲ್ಲಿಸಬೇಕು ಎಂದು ಎಂ.ವಿ. ಅಂಜಿನಪ್ಪ ತಿಳಿಸಿದ್ದಾರೆ.






