ಹೂವಿನಹಡಗಲಿ: ಬೆಲೆ ಏರಿಕೆ ಖಂಡಿಸಿ ಜೆಡಿಎಸ್ನಿಂದ ಪ್ರತಿಭಟನೆ

ಹೂವಿನಹಡಗಲಿ: ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ, ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವನ್ನು ವಿರೋಧಿಸಿ ಹೂವಿನಹಡಗಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಜನಸಾಮಾನ್ಯರಿಗೆ ಹೊರೆಯಾಗಿರುವ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು, ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಡುವೆ ಬಸ್ ಪ್ರಯಾಣ ದರ ಹಾಗೂ ಹಾಲು, ಮೊಸರಿನ ಬೆಲೆ ಹೆಚ್ಚಳ ಮಾಡಿರುವುದು ಕೂಲಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು ಮತ್ತು ನಿತ್ಯ ಪ್ರಯಾಣಿಕರಿಗೆ ಮತ್ತಷ್ಟು ಆರ್ಥಿಕ ಸಂಕಷ್ಟ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕೂಡಲೇ ಬಸ್ ಪ್ರಯಾಣ ದರ ಹಾಗೂ ಹಾಲು, ಮೊಸರಿನ ಬೆಲೆ ಇಳಿಕೆ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷದ ವತಿಯಿಂದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಸೋಮಪ್ಪ ಲಂಬಾಣಿ, ಕಾರ್ಯಾಧ್ಯಕ್ಷ ಹನುಮನಗೌಡ ವಿ. ಕಳಸರೆಡ್ಡಿ, ಮಹಾ ಪ್ರಧಾನ ಕಾರ್ಯದರ್ಶಿ ವಿ. ಭೋಜರಾಜ್, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಹಿರೇಮಠ, ಮಹಿಳಾ ತಾಲೂಕು ಅಧ್ಯಕ್ಷ ಎಸ್ ಎಂ ಕಲಾವತಿ.ಪ್ರಧಾನ ಕಾರ್ಯದರ್ಶಿ ವಡೇರಾಯನಹಳ್ಳಿ ರಾಜಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಬಿ ಸಾಬ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.






