ಹೊಸಪೇಟೆ : ಹಿರಿಯೂರು ಫ್ಲೈಓವರ್ ಬಳಿ ಆಂಬುಲೆನ್ಸ್-ಲಾರಿ ನಡುವೆ ಭೀಕರ ಅಪಘಾತ

ವಿಜಯನಗರ : ಹೊಸಪೇಟೆಯಿಂದ ಬೆಂಗಳೂರಿಗೆ ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್, ಲಾರಿಗೆ ಢಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಔಟರಿಂಗ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ.
ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆಂಬುಲೆನ್ಸ್ ನಲ್ಲಿ ಸಾಗಿಸಲಾಗುತ್ತಿದ್ದ ರೋಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು. ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶೇಷವಾಗಿ ಮಧ್ಯರಾತ್ರಿ ಹಾಗೂ ಬೆಳಗಿನ ಜಾವದ ವೇಳೆಯಲ್ಲಿ ನಿದ್ರಾಹೀನ ಚಾಲನೆ, ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆದ್ದಾರಿ ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






