ಹೊಸಪೇಟೆ | ಸರಕಾರಿ ಶಾಲೆಗಳ ಮುಚ್ಚುಗಡೆ ಖಂಡನೀಯ: ಡಾ.ಚಂದ್ರಶೇಖರ್

ಹೊಸಪೇಟೆ, ಡಿ.22: ರಾಜ್ಯ ಸರಕಾರ ಸರಕಾರಿ ಶಾಲೆಗಳನ್ನು ಮುಚ್ಚಿ ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ ಎಂದು ಪ್ರಗತಿಪರ ಚಿಂತಕ ಡಾ.ಎಸ್.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ.
ನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪ್ರಥಮ ಸಮ್ಮೇಳನವನ್ನು ಉದ್ಘಟಿಸಿ ಅವರು ಮಾತನಾಡಿದರು.
ಹಿಂದೆ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಮೂಲಕ ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿ ಸಂಘಟನೆಯು ಹೋರಾಟ ಮಾಡಿ 6,200 ಸರಕಾರಿ ಶಾಲೆಗಳನ್ನು ಉಳಿಸಿದೆ. ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕು. ಶಿಕ್ಷಣ ನಮ್ಮ ಹಕ್ಕು, ಈ ಶಿಕ್ಷಣ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಒಂದಾಗಬೇಕು ಎಂದು ಅವರು ಹೇಳಿದರು.
ಎಐಡಿಎಸ್‌ಒ ರಾಜ್ಯಾಧ್ಯಕ್ಷ ಕೆ.ಎಸ್.ಅಶ್ವಿನಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಹಿಂದೆ ಸಾವಿತ್ರಿ ಬಾಫುಲೆ, ಜ್ಯೋತಿರಾ ಫುಲೆ ಮತ್ತು ವಿದ್ಯಾಸಾಗರ್ ಂತಹ ಮಹಾನ್ ವ್ಯಕ್ತಿಗಳು ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ಎಲ್ಲಾ ಕಡೆ ಶಾಲೆಗಳನ್ನು ತೆರೆಯಲು ಹೋರಾಡಿದರು. ಆದರೆ ಈಗಿನ ಸರಕಾಗಳು ಇಂತಹ ಮಹಾನ್ ವ್ಯಕ್ತಿಗಳ ವಿಚಾರದ ವಿರುದ್ಧವಾಗಿ ಶಾಲೆಗಳನ್ನು ಮುಚ್ಚುತ್ತಿವೆ, ರಾಜ್ಯ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಯ ಹೆಸರಿನಲ್ಲಿ ಗ್ರಾಮ ಪಂಚಾಯತ್‌ಗೆ ಒಂದರಂತೆ ರಾಜ್ಯದಲ್ಲಿ 6,000 ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು 40 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿ ರಾಜ್ಯದ ವಿದ್ಯಾರ್ಥಿ ಮತ್ತು ಜನತೆಯ ಮೇಲಿದೆ ಎಂದರು.
ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರಕಾರದ ಸ್ಪಷ್ಟನೆ, ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಹೇಳುತ್ತಿರುವ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಆಕ್ರೋಶ್ಯ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು ಮತ್ತು ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ, ಸರಕಾರದ ಘೋರ ಹುನ್ನಾರ ಮತ್ತು ಕರಾಳ ಸತ್ಯವನ್ನು ಎಐಡಿಎಸ್‌ಒ ಬಯಲಿಗೆಳೆದಿದೆ ಎಂದರು.
ವಿಜಯನಗರ ಜಿಲ್ಲೆಯ ಸಂಘಟನೆಯ ನೂತನ ಜಿಲ್ಲಾ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರವಿಕಿರಣ್ ಜೆಪಿ, ಕಾರ್ಯದರ್ಶಿ ಉಮಾದೇವಿಯು, ಜಂಟಿ ಕಾರ್ಯದರ್ಶಿ ಆದಿತ್ಯ, ಚಂದ್ರ, ಆಕಾಶ್, ಜ್ಞಾನೇಶ್, ಮೇರಿ, ನೀಮ, ಕಾವೇರಿ ಎ, ದಿವ್ಯಶ್ರೀ. ಕಾರ್ಯಕಾರಿ ಸಮಿತಿಯಲ್ಲಿ ನಾನಾ ಕಾಲೇಜಿನ 12 ವಿದ್ಯಾರ್ಥಿಗಳು ಹಾಗೂ 25 ವಿದ್ಯಾರ್ಥಿಗಳು ಸದಸ್ಯರಾಗಿ ಆಯ್ಕೆಯಾದರು.
ಸಮ್ಮೇಳನದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಬೇಕು ಹಾಗೂ ಇನ್ನಿತರ ವಿದ್ಯಾರ್ಥಿಗಳ ಬೇಡಿಕೆಯ ಗೊತ್ತುವಳಿಗಳನ್ನು ಮಂಡಿಸಲಾಯಿತು.
ಸಮ್ಮೇಳನದಲ್ಲಿ ನಾನಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.







