ಕೂಡ್ಲಿಗಿ | ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ
ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿದ ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ಕೂಡ್ಲಿಗಿ/ವಿಜಯನಗರ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಕೂಡ್ಲಿಗಿ ತಾಲೂಕು ಪಂಚಾಯಿತಿ ವತಿಯಿಂದ ಗುಡೆಕೋಟೆ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವು ಚಂದ್ರಶೇಖರಪುರ ಗ್ರಾಮದಲ್ಲಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಶಾಸಕರು ಆಯ್ಕೆಯಾದ ವರ್ಷದಿಂದಲೂ ನಿರಂತರವಾಗಿ ‘ಮನೆ ಮನೆಗೆ ನಮ್ಮ ಶಾಸಕರು’ ಕಾರ್ಯಕ್ರಮದ ಮೂಲಕ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಇದೀಗ ಆ ಕಾರ್ಯಕ್ರಮದ ಆಶಯವನ್ನು ಮುಂದುವರಿಸಿಕೊಂಡು ಸರ್ಕಾರವೇ ಇಲಾಖೆಯ ಮೂಲಕ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಮುಂದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ., ಚಂದ್ರಶೇಖರಪುರ ಗ್ರಾಮದೊಂದಿಗೆ ತಮಗೆ ಅವಿನಾಭಾವ ಸಂಬಂಧವಿದ್ದು, ಇಲ್ಲಿನ ಜನರು ಸಂಸ್ಕಾರವಂತರು ಹಾಗೂ ಜ್ಞಾನವಂತರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಮದುರ್ಗ ಗ್ರಾಮವು ತಮ್ಮ ತಂದೆಯವರೊಂದಿಗೆ ವಿಶೇಷ ಆತ್ಮೀಯ ಸಂಬಂಧ ಹೊಂದಿದೆ ಎಂದು ತಮ್ಮ ಒಡನಾಟವನ್ನು ಭಾವುಕರಾಗಿ ಸ್ಮರಿಸಿದರು.
ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆರ್ಥಿಕ ಹಾಗೂ ಸಾಮಾಜಿಕ ಕಾರಣಗಳಿಂದ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು. ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸುವುದರ ಜೊತೆಗೆ ಪೋಕ್ಸೋ ಪ್ರಕರಣಗಳು, ಬಾಲ್ಯವಿವಾಹ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶದಿಂದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಲವು ದಶಕಗಳಿಂದ ಸ್ಥಳೀಯರು ನಿರೀಕ್ಷಿಸುತ್ತಿದ್ದ ಕಾಲೇಜು ಸೌಲಭ್ಯದ ಬೇಡಿಕೆಯನ್ನು ಪರಿಗಣಿಸಿ, ಸಿ.ಎಸ್.ಪುರಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ತಿಳಿಸಿದರು.
ನಂತರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮಗಳ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಜನರ ಅಹವಾಲುಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಹಾಗೂ ಸೂಕ್ತ ಮಾರ್ಗದರ್ಶನ ದೊರೆತ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಡಿವೈಎಸ್ಪಿ ಮಲ್ಲೇಶಪ್ಪ ದೊಡ್ಮನಿ, ಸಿಡಿಪಿಒ ಮಾಲನ್ ಬಿ., ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.






