ಅಕ್ಟೋಬರ್‌ನಲ್ಲಿ ಹೊಸ 300 ಹಾಸಿಗೆಯ ಜಿಲ್ಲಾ ಆಸ್ಪತ್ರೆ ಉದ್ಘಾಟನೆ : ಶಾಸಕ ಎಚ್.ಆರ್.ಗವಿಯಪ್ಪ
ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರ ಹಾಜರಾತಿ ಕಡ್ಡಾಯ; ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ನಿರ್ಧಾರ

ವಿಜಯನಗರ (ಹೊಸಪೇಟೆ): ಜಂಬುನಾಥಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ 300 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ಕಾಮಗಾರಿ ಹಾಗೂ ವೈದ್ಯಕೀಯ ಉಪಕರಣಗಳ ಪೂರೈಕೆ ಅಂತಿಮ ಹಂತದಲ್ಲಿದ್ದು, ಮುಂದಿನ ಅಕ್ಟೋಬರ್ ತಿಂಗಳೊಳಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ ಆಸ್ಪತ್ರೆಯನ್ನು ಉದ್ಘಾಟಿಸಲಾಗುವುದು ಎಂದು ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ಸೋಮವಾರ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಯ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈಗಾಗಲೇ ಶೇ.50ಕ್ಕೂ ಹೆಚ್ಚು ವೈದ್ಯಕೀಯ ಉಪಕರಣಗಳು ಪೂರೈಕೆಯಾಗಿವೆ. ಉಳಿದ ಉಪಕರಣಗಳು ಹಾಗೂ ಅಗತ್ಯ ಸಾಮಗ್ರಿಗಳು ಮುಂದಿನ ಒಂದು ತಿಂಗಳೊಳಗೆ ಲಭ್ಯವಾಗಲಿವೆ ಎಂದು ತಿಳಿಸಿದರು.
ಉದ್ಘಾಟನೆಗೂ ಮುನ್ನ ಆಸ್ಪತ್ರೆಯ ಸ್ವಚ್ಛತೆ, ವೈದ್ಯಕೀಯ ಉಪಕರಣಗಳ ಅಳವಡಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಕೆಆರ್‌ಡಿಬಿ ಅನುದಾನದಡಿ ಸ್ಕ್ಯಾನಿಂಗ್ ಸೇರಿದಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಿ ಆಸ್ಪತ್ರೆಯನ್ನು ಹಂತ ಹಂತವಾಗಿ ಆಧುನೀಕರಿಸಲಾಗುವುದು ಎಂದು ಹೇಳಿದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾತ್ರಿ ವೇಳೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾತ್ರಿ ಕರ್ತವ್ಯದಲ್ಲಿರುವ ವೈದ್ಯರ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ರಾತ್ರಿ ಪಾಳಿಯ ವೈದ್ಯರು ಕರ್ತವ್ಯ ಮುಗಿಸಿದ ಬಳಿಕ ರಿಲೀವಿಂಗ್ ವೈದ್ಯರು ಸ್ಥಳಕ್ಕೆ ಆಗಮಿಸಿ ಜವಾಬ್ದಾರಿ ವಹಿಸಿಕೊಂಡ ನಂತರವೇ ಆಸ್ಪತ್ರೆಯಿಂದ ತೆರಳಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ವಾರ್ಡ್ ಹಾಗೂ ಲೇಬರ್ ರೂಮ್‌ಗೆ ಅನಗತ್ಯ ಪ್ರವೇಶ ತಡೆಯಲು ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ. ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳ ಸುರಕ್ಷತೆಗಾಗಿ ಬೆಳಿಗ್ಗೆ ಮತ್ತು ರಾತ್ರಿ ಪಾಳಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವುದರ ಜೊತೆಗೆ ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಔಟ್‌ಪೋಸ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
60 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೂ ತಿಂಗಳಿಗೆ 400ಕ್ಕೂ ಹೆಚ್ಚು ಹೆರಿಗೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕಾರ್ಯವನ್ನು ಶಾಸಕ ಗವಿಯಪ್ಪ ಶ್ಲಾಘಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಾತನಾಡಿ, ನೂತನ ಜಿಲ್ಲಾ ಆಸ್ಪತ್ರೆಗೆ ಸರ್ಕಾರ ಅಗತ್ಯ ಸಿಬ್ಬಂದಿಯನ್ನು ಮಂಜೂರು ಮಾಡಿದೆ. 29 ಮಂದಿ ತಜ್ಞ ವೈದ್ಯರು, 10 ಮಂದಿ ಎಂ.ಬಿ.ಬಿ.ಎಸ್ ವೈದ್ಯರು ಸೇರಿದಂತೆ ಒಟ್ಟು 39 ವೈದ್ಯರು, 120 ಸ್ಟಾಫ್ ನರ್ಸ್‌ಗಳು, 40 ಗ್ರೂಪ್–ಡಿ ಸಿಬ್ಬಂದಿ ಹಾಗೂ ಇಸಿಜಿ, ಎಕ್ಸ್‌ರೇ ಸೇರಿದಂತೆ ವಿವಿಧ ವಿಭಾಗಗಳ 16 ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ವಿವರಿಸಿದರು.
ಒಟ್ಟು 235 ಹೊಸ ಸಿಬ್ಬಂದಿಯನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, 100 ಹಾಸಿಗೆಗಳ ಆಸ್ಪತ್ರೆಯಿಂದ 15 ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನರ್ಸಿಂಗ್ ಹಾಗೂ ಗ್ರೂಪ್–ಡಿ ಸಿಬ್ಬಂದಿ ಕೊರತೆಯನ್ನು ನೀಗಿಸಲು 9 ರಿಂದ 15 ಹೆಚ್ಚುವರಿ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಈ ವೇಳೆ ಶಾಸಕ ಎಚ್.ಆರ್. ಗವಿಯಪ್ಪ ಅವರು ನೂತನ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳು, ಕಾಮಗಾರಿ ಪ್ರಗತಿ ಹಾಗೂ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯವನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಲ್.ಆರ್. ಶಂಕರ್ ನಾಯ್ಕ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






