ಶಾಸಕ ಬಿ.ನಾಗೇಂದ್ರಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ನಾಗೇಂದ್ರ ಅಭಿಮಾನಿಗಳು ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ಮುಖಂಡರು ಜಮಾಯಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬಿ. ನಾಗೇಂದ್ರ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆ ಹಾಗೂ ಜನಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಿರುವ ನಾಯಕರಾಗಿದ್ದಾರೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದರೂ, ಬಳ್ಳಾರಿ-ವಿಜಯನಗರ ಭಾಗದ ಅಭಿವೃದ್ಧಿ ಹಾಗೂ ಪ್ರಾದೇಶಿಕ ಸಮತೋಲನದ ದೃಷ್ಟಿಯಿಂದ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಮೂಲಕ ಎಸ್‌ಟಿ ಸಮುದಾಯದ ಆಶಯಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಾಗೇಂದ್ರ ಅಭಿಮಾನಿಗಳು, ಎಸ್‌ಟಿ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.






