ಹೊಸಪೇಟೆಯಲ್ಲಿ ನೂತನ ಇಎಸ್‌ಐ ಆಸ್ಪತ್ರೆ ಸ್ಥಾಪನೆಗೆ ಸಂಸದ ತುಕಾರಾಂ ಅವರಿಗೆ ಮನವಿ

ಹೊಸಪೇಟೆ/ವಿಜಯನಗರ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ ವತಿಯಿಂದ ಹೊಸಪೇಟೆ ನಗರದಲ್ಲಿ ನೂತನ ಇಎಸ್‌ಐ (Employees’ State Insurance) ಆಸ್ಪತ್ರೆ ಸ್ಥಾಪಿಸುವಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಂ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ನಾಲ್ಕೈದು ದಶಕಗಳಿಂದ ಕಾರಿಗನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎಸ್‌ಐ ಆಸ್ಪತ್ರೆ ಕಟ್ಟಡವು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ, ಅದೇ ಸ್ಥಳದಲ್ಲಿ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸುಸಜ್ಜಿತ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಗತ್ಯ ಮಂಜೂರಾತಿ ದೊರಕಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿಯಲ್ಲಿ ಒತ್ತಾಯಿಸಿದರು.
ಹೊಸಪೇಟೆ ನಗರವು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಮಧ್ಯಭಾಗದಲ್ಲಿರುವುದರಿಂದ, ಈ ಭಾಗದ ಕೈಗಾರಿಕೆಗಳು, ವ್ಯಾಪಾರ ಸಂಸ್ಥೆಗಳು ಹಾಗೂ ವಿವಿಧ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರು ಮತ್ತು ಸಿಬ್ಬಂದಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯಲಿದೆ. ಜೊತೆಗೆ ಸುತ್ತಮುತ್ತಲಿನ ಸಾರ್ವಜನಿಕರಿಗೂ ಆಸ್ಪತ್ರೆ ನಿರ್ಮಾಣದಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮನವಿ ಸ್ವೀಕರಿಸಿದ ಸಂಸದ ಈ. ತುಕಾರಾಂ ಅವರು, ವಿಷಯವನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶ್ವಿನ್ ಕೊತಂಬ್ರಿ, ಕಾರ್ಯದರ್ಶಿ ಕೆ. ರಾಜೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯ ರಮೇಶ್ ಗುಪ್ತ, ಅಬ್ದುಲ್ ಹಕ್ ಸೈಟ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ದಾದಾಪೀರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.






