SIR ಪ್ರಕ್ರಿಯೆ ರದ್ದುಪಡಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ರಾಷ್ಟ್ರಪತಿಗಳಿಗೆ ಎಸ್‌ಎಫ್‌ಐ, ಎಐಡಿಎಸ್‌ಒ, ಎಐಡಿವೈಒ ಸಂಘಟನೆಗಳ ಮನವಿ

ಹೊಸಪೇಟೆ/ ವಿಜಯನಗರ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ, ಎಐಡಿಎಸ್‌ಒ ಮತ್ತು ಎಐಡಿವೈಒ ಎಡ ವಿದ್ಯಾರ್ಥಿ-ಯುವಜನ ಸಂಘಟನೆಗಳ ಮುಖಂಡರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಹೊಸಪೇಟೆ ತಹಸೀಲ್ದಾರ್ ಕಚೇರಿಯ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಹಾಗೂ ನಿಷ್ಪಕ್ಷಪಾತ ಧೋರಣೆ ಇರಬೇಕು ಎಂದು ಆಗ್ರಹಿಸಿದರು.
ಬಿಹಾರದಿಂದ ಆರಂಭಿಸಲಾದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸೂಕ್ತ ದಾಖಲೆಗಳ ಪರಿಶೀಲನೆ ಇಲ್ಲದೆ ಬಡವರು, ದಲಿತರು, ಅಲ್ಪಸಂಖ್ಯಾತರು, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳಿದ್ದರೂ ಅವುಗಳನ್ನು ಸಮರ್ಪಕವಾಗಿ ಪರಿಗಣಿಸದೆ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ. ಇದರಿಂದ ಅರ್ಹ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕಿನಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕು
ಸಂವಿಧಾನದ 326ನೇ ವಿಧಿಯು ಸಾರ್ವತ್ರಿಕ ವಯಸ್ಕ ಮತದಾನದ ತತ್ವವನ್ನು ಪ್ರತಿಪಾದಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಕಾರಣಕ್ಕೂ ಅರ್ಹ ಮತದಾರರು ಈ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಜನರ ಹಕ್ಕುಗಳಿಗೆ ಧಕ್ಕೆಯಾಗಬಾರದು ಎಂದು ಸಂಘಟನೆಗಳು ಒತ್ತಾಯಿಸಿವೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತತೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ಪರವಾಗಿ ಪಕ್ಷಪಾತದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಂಘಟನೆಗಳು ಆರೋಪಿಸಿವೆ. ಅಲ್ಲದೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಆಕ್ಷೇಪಗಳಿದ್ದರೂ ಅವುಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ಪ್ರಕ್ರಿಯೆಯನ್ನು ಮುಂದುವರಿಸಲಾಗುತ್ತಿದೆ ಎಂದು ದೂರಿವೆ.
ಹೀಗಾಗಿ ಜನವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಸಂಘಟನೆಗಳು ಪರಿಗಣಿಸಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಬೇಕು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ಸಂರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ, ಜಿಲ್ಲಾ ಸಹಕಾರ್ಯದರ್ಶಿ ಪವನ್ ಕುಮಾರ್, ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷೆ ಉಮಾದೇವಿ, ರವಿ ಕಿರಣ್ ಹಾಗೂ ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಪಂಪಾಣ್ಯ ಉಪಸ್ಥಿತರಿದ್ದರು.






