ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಬೇಡ; ಅಡ್ಡಮತದಾನ ಮಾಡಿದವರು ಯಾರೆಂದು ಗೊತ್ತಿದೆ: ಶ್ರೀರಾಮುಲು

ವಿಜಯನಗರ : ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಆರೋಪದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಬಿ.ಶ್ರೀರಾಮುಲು, ಯಾವುದೇ ಕಾರಣಕ್ಕೂ ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದಲ್ಲಿ ಆಣೆ ಪ್ರಮಾಣದ ಮಾತು ಬೇಡ ಎಂದು ಹೇಳಿದರು.
ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಶ್ರೀರಾಮುಲು, “ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ ಕುಮಾರ್ ಅವರು ಆಣೆ ಪ್ರಮಾಣದ ವಿಚಾರ ಬೇಡ ಎಂದು ಹೇಳಿದ್ದಾರೆ. ನಾನೂ ಅವರ ಅಭಿಪ್ರಾಯಕ್ಕೆ ಬದ್ಧನಾಗಿದ್ದೇನೆ. ಧರ್ಮಸ್ಥಳಕ್ಕೆ ತನ್ನದೇ ಆದ ಪವಿತ್ರತೆ ಇದೆ. ಹೀಗಾಗಿ ಅಲ್ಲಿ ರಾಜಕೀಯ ಕಾರಣಗಳಿಗಾಗಿ ಆಣೆ-ಪ್ರಮಾಣ ಮಾಡುವ ಅಗತ್ಯವಿಲ್ಲ” ಎಂದು ಹೇಳಿದರು.
ಅಡ್ಡಮತದಾನ ಮಾಡಿದವರು ಯಾರೆಂಬುದು ನನಗೂ ತಿಳಿದಿದೆ. ಆದರೆ ಆ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ ಹೊರತು ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ಶ್ರೀರಾಮುಲು ತಿಳಿಸಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವದ ಕುರಿತು ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಅಥವಾ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.
ನಿನ್ನೆ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿದೆ ಎಂದು ಆರೋಪಿಸಿದ ಶ್ರೀರಾಮುಲು, “ಹರಿಪ್ರಸಾದ್ ಅವರು ನೇರವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದಂತಿದೆ” ಎಂದು ವ್ಯಂಗ್ಯವಾಡಿದರು.
ಆರ್‌ಎಸ್‌ಎಸ್ ಬಗ್ಗೆ ಪದೇಪದೇ ಟೀಕೆ ಮಾಡುವ ಬಿ.ಕೆ. ಹರಿಪ್ರಸಾದ್ ಅವರು ಮೊದಲು ಗ್ರಾಮ ಪಂಚಾಯಿತಿ ಚುನಾವಣೆಯನ್ನಾದರೂ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ ಶ್ರೀರಾಮುಲು, “ಯಾವುದೇ ನೇರ ಚುನಾವಣೆ ಗೆಲ್ಲದೇ ಹಿಂಬಾಗಿಲಿನಿಂದ ರಾಜಕೀಯ ಮಾಡುವವರು ಹರಿಪ್ರಸಾದ್. ಗಾಂಧಿ ಕುಟುಂಬದ ಐದು ತಲೆಮಾರುಗಳ ಜೊತೆ ಕೆಲಸ ಮಾಡಿದ್ದೇನೆ ಎಂದು ಹೇಳುವ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಶ್ರೀರಾಮುಲು ಟೀಕಿಸಿದರು.






