Vijayanagar | ಬಾಲಕಾರ್ಮಿಕ ಪದ್ಧತಿ ಸಮಾಜದ ದೊಡ್ಡ ಅನಿಷ್ಟ : ಸಿ.ವಿರುಪಾಕ್ಷಪ್ಪ

ಕೂಡ್ಲಿಗಿ/ವಿಜಯನಗರ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಜಸ್ಟ್ ರೈಟ್ ಫಾರ್ ಚಿಲ್ಡ್ರನ್ಸ್’ ಹಾಗೂ ‘ಸ್ನೇಹ’ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ. ವಿರುಪಾಕ್ಷಪ್ಪ, ಬಾಲಕಾರ್ಮಿಕ ಪದ್ಧತಿ ದೇಶದ ಅತಿದೊಡ್ಡ ಸಾಮಾಜಿಕ ಅನಿಷ್ಟಗಳಲ್ಲಿ ಒಂದಾಗಿದ್ದು, ಬಾಲ್ಯದಲ್ಲೇ ದುಡಿಯುವ ಮಗುವಿನ ಭವಿಷ್ಯ ಮಾತ್ರವಲ್ಲದೆ ಸಮಾಜದ ಅಭಿವೃದ್ಧಿಗೂ ಧಕ್ಕೆ ಉಂಟುಮಾಡುತ್ತದೆ ಎಂದು ಹೇಳಿದರು.
14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಮಕ್ಕಳನ್ನು ಕೆಲಸಕ್ಕೆ ಬಳಸುವ ಮಾಲೀಕರು ಹಾಗೂ ಸಹಕರಿಸುವ ಪೋಷಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ. ಅಂತಹವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸುವ ಅವಕಾಶವಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇಲಾಖೆಯ ಎಸ್‌ಐ ಬಸವರಾಜ್ ಶೆಟ್ಟಿ, ಬಾಲಕಾರ್ಮಿಕ ಪದ್ಧತಿ ಗಂಭೀರ ಅಪರಾಧವಾಗಿದ್ದು, ಎಲ್ಲಿಯಾದರೂ ಇಂತಹ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಕಡಿಮೆ ಸಂಬಳಕ್ಕೆ ಹೆಚ್ಚು ಕೆಲಸ ಮಾಡಿಸಿಕೊಳ್ಳುವ ಶೋಷಣೆಯ ಮನೋಭಾವದಿಂದಲೇ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಶಾಲೆಯ ಮುಖ್ಯಗುರು ಬಸವರಾಜ ಮಾತನಾಡಿ, ಶಿಕ್ಷಣದಿಂದ ವಂಚಿತರಾಗುವ ಮಕ್ಕಳು ದುಶ್ಚಟಗಳತ್ತ ತಿರುಗುವ ಸಾಧ್ಯತೆ ಹೆಚ್ಚಿದ್ದು, ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ವಕೀಲರು, ಶಿಕ್ಷಕರು, ಸ್ನೇಹ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರೋಜಾರಾಣಿ ಪ್ರಾರ್ಥನೆ ನೆರವೇರಿಸಿದರೆ, ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು. ಮಹಾದೇವಿ ಸ್ವಾಗತಿಸಿದರು ಹಾಗೂ ರುದ್ರಪ್ಪ ವಂದನಾರ್ಪಣೆ ಸಲ್ಲಿಸಿದರು.






