ವಿಜಯನಗರ | ಸರಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಅಂಗುಳ ಶಸ್ತ್ರಚಿಕಿತ್ಸೆ ಬಡವರಿಗೆ ವರದಾನ : ಡಾ.ಎಲ್.ಆರ್.ಶಂಕರ ನಾಯ್ಕ

ವಿಜಯನಗರ (ಹೊಸಪೇಟೆ) : ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಹಾಗೂ ಇತರ ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುತ್ತಿರುವುದು ಬಡವರ್ಗದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ ನಾಯ್ಕ ಹೇಳಿದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಬಿಎಂಎಸ್‌ಎಸ್ ಫೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಏರ್ಪಡಿಸಿದ್ದ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಸೇವೆಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದಕ್ಕಾಗಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಾರ್ವಜನಿಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸೀಳು ತುಟಿ ಹಾಗೂ ಸೀಳು ಅಂಗುಳ ಸಮಸ್ಯೆಗಳು ಭ್ರೂಣದ ಬೆಳವಣಿಗೆಯ ವೇಳೆ ಉಂಟಾಗುವ ಅಸಹಜತೆಯಿಂದ ಸಂಭವಿಸುತ್ತವೆ. ಇವುಗಳನ್ನು ಸೂಕ್ಷ್ಮ ಹಾಗೂ ಸಣ್ಣ ಶಸ್ತ್ರಚಿಕಿತ್ಸೆಯ ಮೂಲಕ ಸುಲಭವಾಗಿ ಸರಿಪಡಿಸಬಹುದಾಗಿದೆ. ಆದ್ದರಿಂದ ಯಾವುದೇ ರೀತಿಯ ಆತಂಕ ಬೇಡದೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.







